ಬೆಂಗಳೂರು: ಕಾಂಗ್ರೆಸ್ ಪಕ್ಷ ಸಮುದ್ರವಿದ್ದಂತೆ ಅದಕ್ಕೆ ನೂರಾರು ನಾಯಕರು ಬರುತ್ತಾರೆ, ಹೋಗುತ್ತಾರೆ. ಯಾರೇ ಬರಲಿ, ಯಾರೇ ಹೋಗಲಿ ಪಕ್ಷಕ್ಕೆ ಅದರಿಂದ ಯಾವುದೇ ನಷ್ಟವಾಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕಚೇರಿಯಲ್ಲಿ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ (Jagadish Shettar) ಅವರು ಬಿಜೆಪಿ (BJP) ಆಂತರಿಕ ವಿಚಾರದಿಂದ ಬೇಸತ್ತು. ಆ ಪಕ್ಷದ ವಿರುದ್ಧ ದೊಡ್ಡ ಆರೋಪ ಮಾಡಿ ಕಾಂಗ್ರೆಸ್ ಸೇರಿದ್ದರು. ಅವರಿಗೆ ಪಕ್ಷದ ಟೆಕೆಟ್ ನೀಡಿದ್ದೆವು. 35 ಸಾವಿರ ಮತಗಳ ಅಂತರದಲ್ಲಿ ಸೋತಿದ್ದರು. ಆದರೂ ಅವರಿಗೆ ವಿಧಾನ ಪರಿಷತ್ತಿಗೆ ನಾಮ ನಿರ್ದೇಶನ ಮಾಡಿದ್ದೆವು. ಕಳೆದ 2-3 ತಿಂಗಳಿನಿಂದ ಬಿಜೆಪಿ ನಾಯಕರು ಅವರನ್ನು ಸಂಪರ್ಕ ಮಾಡುತ್ತಿದ್ದರು. ಮೊನ್ನೆ ಕೂಡ ಬಿಜೆಪಿ ಸೇರುವುದಿಲ್ಲ ಎಂದು ಅವರು ಹೇಳಿದ್ದರು. ಆದರೆ ಅವರು ಏಕಾಏಕಿ ಪಕ್ಷ ತೊರೆದಿದ್ದಾರೆ.
ಈಗಲೂ ಬಹಳ ಮಂದಿ ನಮ್ಮ ಪಕ್ಷ ಸೇರಲು ಎದುರು ನೋಡುತ್ತಿದ್ದಾರೆ. ನಾವು ಸಿದ್ಧಾಂತ, ನೀತಿ ಮೇಲೆ ರಾಜಕಾರಣ ಮಾಡುವವರು. ಬೆಳಗಾವಿ ಹಾಗೂ ಇತರೆ ಭಾಗದ ನಾಯಕರು, ಕಾರ್ಯಕರ್ತರು, ಜಗದೀಶ್ ಶೆಟ್ಟರ್ ಅವರು ಬಿಜೆಪಿಗೆ ಹೋಗಿದ್ದು ಒಳ್ಳೆಯದಾಯಿತು. ದೂರದೃಷ್ಟಿ ಇಟ್ಟುಕೊಂಡು ಅವರಿಗೆ ನಾವು ಅವಕಾಶ ಮಾಡಿಕೊಟ್ಟಿದ್ದೆವು. ಅವರು ಬಿಜೆಪಿ ವಿರುದ್ಧ ಕೊಟ್ಟ ಹೇಳಿಕೆಗಳಿಗೆ ಈಗ ಅವರೇ ಉತ್ತರ ನೀಡಬೇಕು. ಅದರ ಬಗ್ಗೆ ನಾವು ಮಾತನಾಡುವ ಅಗತ್ಯವಿಲ್ಲ. ಅವರ ರಾಜೀನಾಮೆಯಿಂದ ತೆರವಾದ ಸ್ಥಾನವನ್ನು ಕಾಂಗ್ರೆಸ್ನ ನಿಷ್ಠಾವಂತ ಕಾರ್ಯಕರ್ತನಿಗೆ ನೀಡುತ್ತೇವೆ ಎಂದು ತಿಳಿಸಿದರು.