ನವದೆಹಲಿ : ಹಣಕಾಸು ಆಯೋಗ ಸ್ವತಂತ್ರ ಸಂಸ್ಥೆ. ಅದರಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡುವುದಿಲ್ಲ ಎಂದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ದೆಹಲಿಯ ಜಂತರ್ ಮಂತರ್ನಲ್ಲಿ ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು ಸಂಸದರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು.
ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಣಕಾಸು ಆಯೋಗ ಸ್ವತಂತ್ರ ಸಂಸ್ಥೆ. ನಾವು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಕೇಂದ್ರ ಸರ್ಕಾರ ಮಧ್ಯಪ್ರಮೇಶ ಮಾಡದೇ ಇದ್ದರೂ ಹಣ ಯಾಕೆ ನೀಡಿಲ್ಲ ಎಂದು ಪ್ರಶ್ನಿಸಿ ಅಮ್ಮಾ ನಿರ್ಮಲಾ, ನಮ್ಮ ದುಡ್ಡು ನೀಡಮ್ಮ ಎಂದು ಹೇಳಿ ವ್ಯಂಗ್ಯವಾಡಿದರು.
ಹಣಕಾಸು ಆಯೋಗ ನಿಯೋಜಿಸುವ ಅಧಿಕಾರ ಪ್ರಧಾನಿ ನರೇಂದ್ರ ಮೋದಿ ಅವರಿಗಿದೆ. 15ನೇ ಹಣಕಾಸು ಆಯೋಗದಲ್ಲಿ ದಕ್ಷಿಣ ಭಾರತದವರು ಯಾರು ಇರಲಿಲ್ಲ. ಇದರಿಂದ ದಕ್ಷಿಣ ಭಾರತಕ್ಕೆ ಅನ್ಯಾಯವಾಗಿದೆ. ಈ ಅನ್ಯಾಯವನ್ನು ಸರಿಪಡಿಸಲು ಈ ಪ್ರತಿಭಟನೆ ಎಂದು ಕಿಡಿಕಾರಿದರು.
ಕರ್ನಾಟಕಕ್ಕೆ ಅನ್ಯಾಯ ಆಗಲು ಸಿದ್ದರಾಮಯ್ಯ ಹೊಣೆ ಅಲ್ಲ. ಈ ಅನ್ಯಾಯಕ್ಕೆ ಕಾರಣ ಕೇಂದ್ರ ಸರ್ಕಾರ, ಪ್ರಧಾನಿ ನರೇಂದ್ರ ಮೋದಿ. ಸತ್ಯ ಮುಚ್ಚಿಡಲು ಸಾಧ್ಯವಿಲ್ಲ ಯಡಿಯೂರಪ್ಪ, ಬೊಮ್ಮಾಯಿ ಎಂದು ವಾಗ್ದಾಳಿ ನಡೆಸಿದರು.