ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದಂತ ಮರು ದಿನವೇ, ಸಿಎಂ ಸಿದ್ಧರಾಮಯ್ಯ ಅವರು ಸಾರ್ವಜನಿಕರಿಗೆ ಇಷ್ಟವಾಗುವಂತ ತೀರ್ಮಾನವನ್ನು ಕೈಗೊಂಡಿದ್ದಾರೆ. ಸಾರ್ವಜನಿಕರಿಗೆ ತೊಂದರೆ ಆಗುವಂತ ಜೀರೋ ಟ್ರಾಫಿಕ್ ಸೌಲಭ್ಯ ಬೇಡ, ಅದನ್ನು ವಾಪಾಸ್ಸು ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಸಿಎಂ ಸಿದ್ಧರಾಮಯ್ಯ ಅವರು ನನ್ನ ವಾಹನ ಸಂಚಾರಕ್ಕೆ ನೀಡಲಾಗಿರುವ ಜೀರೋ ಟ್ರಾಫಿಕ್ ಸೌಲಭ್ಯವನ್ನು ಹಿಂದಕ್ಕೆ ಪಡೆಯುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ. ಜೀರೊ ಟ್ರಾಪಿಕ್‍ನಿಂದಾಗಿ ರಸ್ತೆಯಲ್ಲಿ ವಾಹನ ದಟ್ಟಣೆ ಉಂಟಾಗಿ ಸಾರ್ವಜನಿಕರಿಗೆ ಅನಾನುಕೂಲವಾಗುತ್ತಿರುವುದನ್ನು ಕಂಡು ಈ ನಿರ್ಧಾರ ಕೈಗೊಂಡಿದ್ದೇನೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇನ್ನೂ ಇದಷ್ಟೇ ಅಲ್ಲದೇ ನಾಳೆಯಿಂದ ಸಾರ್ವಜನಿಕರಿಂದ ಗೌರವ-ಸನ್ಮಾನದ ರೂಪದಲ್ಲಿ ಹಾರ-ತುರಾಯಿ, ಶಾಲು-ಶಲ್ಯಗಳನ್ನು ಸ್ವೀಕರಿಸದೆ ಇರಲು ನಿರ್ಧರಿಸಿದ್ದೇನೆ. ಇದು ನನ್ನ ಮನೆ-ಕಚೇರಿ ಮತ್ತು ಸಾರ್ವಜನಿಕ ಸಮಾರಂಭಗಳಿಗೂ ಅನ್ವಯವಾಗುತ್ತದೆ. ಪ್ರೀತಿ-ಗೌರವವನ್ನು ಕಾಣಿಕೆಗಳ ಮೂಲಕವೇ ಸಲ್ಲಿಸಬೇಕೆನ್ನುವವರು ಪುಸ್ತಕಗಳನ್ನು ನೀಡಬಹುದು. ನಿಮ್ಮೆಲ್ಲರ ಪ್ರೀತಿ-ಅಭಿಮಾನ ಸದಾ ನನ್ನ ಮೇಲಿರಲಿ ಎಂಬುದಾಗಿ ಮನವಿ ಮಾಡಿದ್ದಾರೆ.
ಈ ನಿರ್ಧಾರವನ್ನು ಜನತೆ ಸ್ವಾಗಿತಿಸಿದ್ದು, ಇದು ಇತರೆ ಎಲ್ಲಾ ವಿಐಪಿಗಳಿಗೆ ಮೇಲ್ಪಂಕ್ತಿಯಾಗಲಿ ಎಂದು ಆಶಿಸಿದ್ದಾರೆ. ನಿಮ್ಮ ಸಂಪುಟದ ಉಪಮುಖ್ಯಮಂತ್ರಿ, ಗೃಹ ಸಚಿವರು ಸೇರಿದಂತೆ ಎಲ್ಲಾ ಹಿರಿಯ ಸಚಿವರು ಕೂಡ ತಮ್ಮ ಪ್ರವಾಸ ಸಂದರ್ಭದಲ್ಲಿ ಅನಗತ್ಯವಾಗಿ ಸಂಚಾರ ಕಿರಿಕಿರಿ ಮಾಡದಂತೆ ಅವರಿಗೂ ತಿಳಿ ಹೇಳಿ ಎಂಬುದಾಗಿ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಮನವಿ ಮಾಡಿಕೊಂಡಿದ್ದಾರೆ.