ಬೆಂಗಳೂರು : ರಾಜ್ಯದಲ್ಲಿ ಮತ್ತೆ ವರುಣ ಅಬ್ಬರಿಸಲಿದ್ದು, ಇಂದಿನಿಂದ ಮೂರುನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ, ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಿದೆ. ಕರ್ನಾಟಕದ ಕೆಲವೆಡೆ ನಿನ್ನೆ ಬಿರುಗಾಳಿ ಸಹಿತ ಭಾರಿ ಮಳೆಯಾಗಿದ್ದು, ಇನ್ನೂ ಮೂರ್ನಾಲ್ಕು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದ ಪ್ರತ್ಯೇಕ ಕಡೆಗಳಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ಇನ್ನೂ ಚಿಕ್ಕಮಗಳೂರು, ಕೊಡಗು ಹಾಗೂ ಶಿವಮೊಗ್ಗದಲ್ಲಿ ಜೂನ್ 1ರ ವರೆಗೆ ಭಾರಿ ಮಳೆಯಾಗುವ ಸಂಭವ ಇದೆ. ಹೀಗಾಗಿ ಜನರು ಮುಂಜಾಗ್ರತಾ ಕ್ರಮ ವಹಿಸಬೇಕು ಎಂದಿರುವ ಇಲಾಖೆ, ಯೆಲ್ಲೋ ಅಲರ್ಟ್ ಘೋಷಿಸಿದೆ.
ಹಾಸನ ಜಿಲ್ಲೆಯ ಬೇಲೂರು ಹಾಗೂ ಮೈಸೂರು ಜಿಲ್ಲೆಯಲ್ಲಿ ನಿನ್ನೆ ತಲಾ 2 ಸೆಂಟಿ ಮೀಟರ್ ಮಳೆಯಾಗಿದೆ. ಚಿಕ್ಕಮಗಳೂರಿನ ಕಳಸ ಹಾಗೂ ಉತ್ತರ ಕನ್ನಡ ಜಿಲ್ಲೆಯ ಶಿರಾಲಿಯಲ್ಲಿ ತಲಾ 1 ಸೆಂಟಿ ಮೀಟರ್ ಮಳೆಯಾಗಿದೆ.
ಇಂದು ಕರಾವಳಿಯ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದದ್ದು, ಗುಡುಗು ಸಹಿತ ಮಳೆಯಾಗುಗವ ಬಹಳಷ್ಟು ಸಾಧ್ಯತೆ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಸುಳಿಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 34 ಮತ್ತು ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.ರಾಜ್ಯದ ಕೆಲವೆಡೆ ಉಷ್ಣಾಂಶದಲ್ಲಿ ಬದಲಾವಣೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಅಂದರೆ 1.6 ಡಿಗ್ರಿ ಸೆಲ್ಸಿಯಸ್ನಿಂದ 3 ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ಹೆಚ್ಚಾಗಿದೆ. ಉಳಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಸಾಮಾನ್ಯವಾಗಿದೆ.ರಾಯಚೂರಿನಲ್ಲಿ ಗರಿಷ್ಠ 40.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಇನ್ನು ಮುಂಗಾರು ಮಳೆ ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿದ್ದು, ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 70,132 ಹೆಕ್ಟೇರ್ ಬಿತ್ತನೆ ಗುರಿ ಇದೆ. ಅನ್ನದಾತ ಬಿತ್ತನೆ ಕಾರ್ಯಕ್ಕೆ ಸಜ್ಜಾಗುತ್ತಿದ್ದು ಭೂತಾಯಿ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಜೂನ್ ಮೊದಲ ವಾರದಲ್ಲಿ ಮುಂಗಾರು ಮಳೆಯ ಸಿಂಚನದೊಂದಿಗೆ ಬಿತ್ತನೆ ಆರಂಭವಾಗಲಿದೆ.
ವರದಿ :- ಸುಚಿತ್ರ ನಿಂಗೇಗೌಡ