ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಇಡಲಾಗಿದೆ ಎಂಬ ಇ-ಮೇಲ್ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಬಿ.ದಯಾನಂದ ಪ್ರತಿಕ್ರಿಯಿಸಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿ, ಈಗಾಗಲೇ ಬೆದರಿಕೆ ಇ-ಮೇಲ್ ಮಾಡಲಾಗಿದ್ದ ಶಾಲೆಗಳಿಗೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಮತ್ತು ಬಾಂಬ್ ಪತ್ತೆ ಸಿಬ್ಬಂದಿ ಹೋಗಿ ಪರಿಶೀಲನೆ ನಡೆಸುತ್ತಿದ್ದಾರೆ. ಬೆಂಗಳೂರು ನಗರದ ಕೆಲವು ಶಾಲೆಗಳಿಗೆ ಬೆದರಿಕೆ ಕರೆ ಬಂದಿದೆ. ಈ ಬಗ್ಗೆ ನಮಗೆ ಮಾಹಿತಿ ಬಂದಕೂಡಲೇ ಕ್ರಮ ಕೈಗೊಳ್ಳಲಾಗಿದೆ.
ಈ ಎಲ್ಲಾ ಶಾಲೆಗಳಿಗೆ ನಮ್ಮ ಬಾಂಬ್ ನಿಷ್ಕ್ರಿಯ ದಳ ಹೋಗಿ ತಪಾಸಣೆ ನಡೆಸಿದೆ. ಈ ಹಿಂದೆಯೂ ಸಹ ಈ ರೀತಿ ಬೆದರಿಕೆ ಕರೆ ಬಂದಿತ್ತು. ಬಹುಶಃ ಇದು ಸುಳ್ಳು ಬಾಂಬ್ ಬೆದರಿಕೆ ಅನ್ನಿಸುತ್ತಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದಿದ್ದಾರೆ.