ಪಂಚ ರಾಜ್ಯಗಳಲ್ಲಿನ ಹೀನಾಯ ಸೋಲಿನ ನಂತರ ಕಾಂಗ್ರೆಸ್ ಆತ್ಮಾವಲೋಕನದಲ್ಲಿ ತೊಡಗಿಕೊಂಡಿದೆ. ಸಂಜೆ 4 ಗಂಟೆಯಿಂದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಸೋನಿಯಾ ಗಾಂಧಿ ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ. ಹಂಗಾಮಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ಸೋನಿಯಾ ಗಾಂಧಿ ಅವರ ಪ್ರಸ್ತಾಪಕ್ಕೆ ಒಮ್ಮತ ಮೂಡಿದರೆ, ಸದ್ಯಕ್ಕೆ ಕಾಂಗ್ರೆಸ್ ಹಿರಿಯ ಮುಖಂಡರಾದ ಮಲ್ಲಿಕಾರ್ಜುನ ಖರ್ಗೆ ಅಥವಾ ಮುಕುಲ್ ವಾಸ್ನಿಕ್ ಅವರನ್ನು ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ಮಾಡುವ ಸಾಧ್ಯತೆಯಿದೆ. ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಇತಿಹಾಸದಲ್ಲೇ ಅತ್ಯಂತ ಕಳಪೆ ಪ್ರದರ್ಶನ ನೀಡಿದ ನಂತರ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೂಡಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬಹುದು ಎಂದು ವಿಶ್ಲೇಷಿಸಲಾಗುತ್ತಿದೆ. ಗಾಂಧಿ ಕುಟುಂಬ ಹೊರತುಪಡಿಸಿ ಇತರರಿಗೆ ಪಟ್ಟ ಕಟ್ಟುವ ಸಾಧ್ಯತೆ ದಟ್ಟವಾಗಿದೆ. ಮುಂದಿನ ದಿನಗಳಲ್ಲಿ ಗುಜರಾತ್ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಇದು ಅನಿವಾರ್ಯವಾಗಿದೆ.
ಒಂದು ವೇಳೆ ಕಾಂಗ್ರೆಸ್ ಏಐಸಿಸಿ ಅಧ್ಯಕ್ಷರನ್ನ ಬದಲಾಯಿಸದಿದ್ದರೆ ಪಕ್ಷದ ಅಸ್ತಿತ್ವದ ಮೇಲೆಯೇ ದೊಡ್ಡ ಪ್ರಶ್ನೆ ಉದ್ಬವಿಸಲಿದೆ. 2024ರ ಲೋಕಸಭಾ ಚುನಾವಣೆ ಹಾಗೂ ಈ ಮಧ್ಯೆ ನಡೆಯಲಿರುವ ವಿವಿಧ ರಾಜ್ಯಗಳ ಚುನಾವಣೆ, 2029ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪಕ್ಷ ಕಠಿಣ ನಿರ್ಧಾರ ತೆಗೆದುಕೊಳ್ಳಬೇಕಾಗಿದೆ. ಜೊತೆಗೆ ಪಕ್ಷವನ್ನು ಇನ್ನಷ್ಟು ಬಲಪಡಿಸಬೇಕಿದೆ. ಪ್ರಧಾನಿ ಮೋದಿಯನ್ನ ಎದುರಿಸುವ ಸಾಮರ್ಥ್ಯ ಕೂಡ ಆ ನಾಯಕನಿಗೆ ಇರಲೇಬೇಕಾಗಿದೆ.