ರಾಜ್ಯದಲ್ಲಿ ಕೊರೊನಾ 2ನೇ ಅಲೆ ಹಿನ್ನೆಲೆಯಲ್ಲಿ 1ರಿಂದ 9ನೇ ತರಗತಿವರೆಗೆ ಪರೀಕ್ಷೆ ಇಲ್ಲದೇ ವಿದ್ಯಾರ್ಥಿಗಳನ್ನು ಉತ್ತೀರ್ಣಗೊಳಿಸಲಾಗುವುದು ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಂತ್ರಿಕ ಸಲಹಾ ಸಮಿತಿಯು 1ರಿಂದ 9ನೇ ತರಗತಿವರೆಗೂ ವಿದ್ಯಾರ್ಥಿಗಳನ್ನು ಪರೀಕ್ಷೆ ಇಲ್ಲದೇ ಉತ್ತೀರ್ಣಗೊಳಿಸಲು ಶಿಫಾರಸು ಮಾಡಿದೆ. ಈ ಸಂಬಂಧ ನಾಳೆ ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ಆತಂಕಾರಿಯಾಗುವ ಮಟ್ಟದಲ್ಲಿ ಹರಡುತ್ತಿದೆ. ಇದು ರೂಪಾಂತರಿ ಕೊರೊನಾ ಎಂಬುದು ನಿಶ್ಚಿತ. ಸದ್ಯಕ್ಕೆ ಇದರ ಹರಡುವ ವೇಗ ಹೆಚ್ಚಿದೆ. ಆದರೆ ಸಾವಿನ ಪ್ರಮಾಣ ಕಡಿಮೆ ಇದೆ. ಮುಂದಿನ ಆರು ವಾರಗಳ ಕಾಲ ಕಠಿಣ ಕ್ರಮಗಳನ್ನು ಕೈಗೊಳ್ಳದೇ ಹೋದಲ್ಲಿ ಅಪಾಯ ನಿಶ್ಚಿತ ಎಂದು ಅವರು ಹೇಳಿದರು.
ಪ್ರಸ್ತುತ ಇರುವ ನಮ್ಮ ಆಸ್ಪತ್ರೆಗಳ ಸಾಮರ್ಥ್ಯದಲ್ಲಿ ಪರಿಸ್ಥಿತಿ ನಿಭಾಯಿಸುವುದು ಕಷ್ಟವಾಗುತ್ತದೆ. ಅನ್ಯ ರಾಜ್ಯಗಳಿಂದ ರಾಜ್ಯ ಪ್ರವೇಶಿಸುವವರು ಹಾಗು ಬೆಂಗಳೂರು ನಗರ ಪ್ರವೇಶಕ್ಕೆ ಮತ್ತಷ್ಟು ನಿರ್ಬಂಧಗಳನ್ನು ವಿಧಿಸಬೇಕಾದು ಅನಿವಾರ್ಯವೆನಿಸಿದೆ ಎಂದು ಸುಧಾಕರ್ ಸ್ಪಷ್ಟಪಡಿಸಿದರು.