ಆರಂಭಿಕ ಇಶಾನ್ ಕಿಶನ್ ಸಿಡಿಲಬ್ಬರದ 89 ರನ್ ನೆರವಿನಿಂದ ಭಾರತ ತಂಡ 62 ರನ್ ಗಳ ಭಾರೀ ಅಂತರದಿಂದ ಶ್ರೀಲಂಕಾ ತಂಡವನ್ನು ಸೋಲಿಸಿ ಟಿ-20 ಸರಣಿಯಲ್ಲಿ 1-0ಯಿಂದ ಮುನ್ನಡೆ ಸಾಧಿಸಿದೆ.
ಲಕ್ನೊದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಟಾಸ್ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ ತಂಡ 20 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 199 ರನ್ ಪೇರಿಸಿತು. ಕಠಿಣ ಗುರಿ ಬೆಂಬತ್ತಿದ ಶ್ರೀಲಂಕಾ ತಂಡ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 136 ರನ್ ಗಳಿಸಲಷ್ಟೇ ಶಕ್ತವಾಯಿತು.
ಕಠಿಣ ಗುರಿ ಬೆಂಬತ್ತಿದ ಲಂಕೆ ಆರಂಭದಿಂದಲೇ ಸತತ ವಿಕೆಟ್ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಚರಿತ್ ಅಸ್ಲಂಕ (53) ಅರ್ಧಶತಕ ಸಿಡಿಸಿ ತಂಡವನ್ನು ಆಲೌಟ್ ಆಗುವ ಅಪಾಯದಿಂದ ಪಾರು ಮಾಡಿದರು.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಭಾರತ ತಂಡ ಇಶಾನ್ ಕಿಶನ್ ಮತ್ತು ಶ್ರೇಯಸ್ ಅಯ್ಯರ್ ಅವರ ಅರ್ಧಶತಕಗಳ ನೆರವಿನಿಂದ ಬೃಹತ್ ಮೊತ್ತ ದಾಖಲಿಸಿತು.
ನಾಯಕ ರೋಹಿತ್ ಶರ್ಮ ಮತ್ತು ಕಿಶನ್ ಮೊದಲ ವಿಕೆಟ್ ಗೆ 111 ರನ್ ಜೊತೆಯಾಟದಿಂದ ಭರ್ಜರಿ ಆರಂಭ ನೀಡಿದರು. ರೋಹಿತ್ 32 ಎಸೆತಗಳಲ್ಲಿ 2 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 42 ರನ್ ಬಾರಿಸಿ ಔಟಾದರೆ, ಕಿಶನ್ 56 ಎಸೆತಗಳಲ್ಲಿ 10 ಬೌಂಡರಿ ಮತ್ತು 3 ಸಿಕ್ಸರ್ ಒಳಗೊಂಡ 89 ರನ್ ಗಳಿಸಿದರು.
ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಕೇವಲ 28 ಎಸೆತಗಳಲ್ಲಿ 5 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ ಅಜೇಯ 57 ರನ್ ಸಿಡಿಸಿದರು.