ಮಧ್ಯಮ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಸಿಡಿಸಿದ ಹ್ಯಾಟ್ರಿಕ್ ಅರ್ಧಶತಕದ ನೆರವಿನಿಂದ ಭಾರತ ತಂಡ 6 ವಿಕೆಟ್ ಗಳಿಂದ ಶ್ರೀಲಂಕಾ ತಂಡವನ್ನು ಸೋಲಿಸಿ ಮೂರು ಪಂದ್ಯಗಳ ಟಿ-20 ಸರಣಿಯನ್ನು ವೈಟ್ ವಾಶ್ ಮಾಡಿದೆ.
ಧರ್ಮಶಾಲಾದಲ್ಲಿ ನಡೆದ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಶ್ರೀಲಂಕಾ ತಂಡವನ್ನು 20 ಓವರ್ ಗಳಲ್ಲಿ 5 ವಿಕೆಟ್ ಗೆ 146 ರನ್ ಗಳಿಗೆ ನಿಯಂತ್ರಿಸಿದ ಭಾರತ ಸುಲಭ ಗುರಿಯನ್ನು 16.5 ಓವರ್ ಗಳಲ್ಲಿ 5 ವಿಕೆಟ್ ಕಳೆದುಕೊಂಡು ಜಯಭೇರಿ ಬಾರಿಸಿತು.
ತಂಡ ಆರಂಭಿಕ ಆಘಾತದಿಂದ ತತ್ತರಿಸಿದರೂ ಏಕಾಂಗಿಯಾಗಿ ಹೋರಾಟ ನಡೆಸಿದ ಶ್ರೇಯಸ್ ಅಯ್ಯರ್ 45 ಎಸೆತಗಳಲ್ಲಿ 9 ಬೌಂಡರಿ ಮತ್ತು 1 ಸಿಕ್ಸರ್ ಸಹಾಯದಿಂದ 73 ರನ್ ಬಾರಿಸಿ ಔಟಾಗದೇ ಉಳಿದರು.
ರವೀಂದ್ರ ಜಡೇಜಾ 15 ಎಸೆತಗಳಲ್ಲಿ 3 ಬೌಂಡರಿ ಒಳಗೊಂಡ 22 ರನ್ ಬಾರಿಸಿ ಔಟಾಗದೇ ಉಳಿದರೆ, ದೀಪಕ್ ಹೂಡಾ 16 ಎಸೆತಗಳಲ್ಲಿ ತಲಾ 1 ಬೌಂಡರಿ ಮತ್ತು ಸಿಕ್ಸರ್ ಸೇರಿದಂತೆ 21 ರನ್ ಬಾರಿಸಿ ಉತ್ತಮ ಬೆಂಬಲ ನೀಡಿದರು.
ಇದಕ್ಕೂ ಮುನ್ನ ಬ್ಯಾಟ್ ಮಾಡಿದ ಶ್ರೀಲಂಕಾ ತಂಡ ಕುಸಿತ ಅನುಭವಿಸಿದರೂ ನಾಯಕ ಡುಸಾನ್ ಶನಕ 38 ಎಸೆತಗಳಲ್ಲಿ 9 ಬೌಂಡರಿ ಮತ್ತು 2 ಸಿಕ್ಸರ್ ಒಳಗೊಂಡ 74 ರನ್ ಬಾರಿಸಿ ತಂಡವನ್ನು ಆಧರಿಸಿದರು.