ರಾಜ್ಯಾದ್ಯಂತ ಮಳೆ ಇನ್ನೂ 4 ದಿನ ಮುಂದುವರಿಯಲಿದ್ದು, ನಾಳೆಯಿಂದ ಮಳೆ ಪ್ರಮಾಣ ಕಡಿಮೆ ಆಗುವ ಸಾಧ್ಯತೆ ಇದೆ ಎಂದು ಹವಮಾನಾ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಭಾಗದಲ್ಲಿ ವ್ಯಾಪಕವಾಗಿ ಮಳೆಯಾಗಿದ್ದು, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಕಡೆ ಮಳೆಯಾಗುತ್ತಿದೆ. ಇದೇ ರೀತಿ ಮಳೆ ಜುಲೈ 28ರವರೆಗೆ ಮುಂದುವರಿಯಲಿದೆ ಎಂದು ಇಲಾಖೆ ತಿಳಿಸಿದೆ.
ಜಾರ್ಖಂಡ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಾಯುಭಾರ ಕುಸಿತವಾಗಿದೆ. ಇದರ ಪರಿಣಾಮ ಕರ್ನಾಟಕ ಹಾಗೂ ಕೇರಳದ ಕರಾವಳಿ ಭಾಗದಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿದ ಪ್ರದೇಶವಿದೆ. ಆದ್ದರಿಂದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಭಾಗಗಳಲ್ಲಿ ಇನ್ನು ಕೆಲವು ದಿನ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ.
ನಾಳೆಯಿಂದ 28 ರವರೆಗೆ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆ ಇದ್ದು, ನಾಳೆಯಿಂದ ಇಡೀ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದ್ದು, ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೆಳಗಾವಿ ಜಿಲ್ಲೆಗಳಲ್ಲಿ ಇಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ನಾಳೆ ಹಾಗೂ ನಾಡಿದ್ದು ಕರಾವಳಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.