ಐಪಿಎಲ್ ನಲ್ಲಿ ಭರ್ಜರಿ ಪ್ರದರ್ಶನ ನೀಡಿದ ರವೀಂದ್ರ ಜಡೇಜಾ, ಮಧ್ಯಮ ವೇಗಿಗಳಾದ ಮೊಹಮದ್ ಶಮಿ ಮತ್ತು ಉಮೇಶ್ ಯಾದವ್ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಗೆ ಪ್ರಕಟಿಸಿದ ಭಾರತ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಟೆಸ್ಟ್ ತಂಡಕ್ಕೆ ಮರಳಿದ್ದಾರೆ.
ಬಿಸಿಸಿಐ ಆಯ್ಕೆ ಸಮಿತಿ ಶುಕ್ರವಾರ 20 ಸದಸ್ಯರ ಬಲಿಷ್ಠ ಭಾರತ ತಂಡವನ್ನು ಪ್ರಕಟಿಸಿದ್ದು, ಅಷ್ಟೇ ಸಂಖ್ಯೆಯ ಮೀಸಲು ಆಟಗಾರರನ್ನು ಪ್ರಕಟಿಸಿದೆ. ಈ ತಂಡ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಮತ್ತು ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಆಡಲಿದೆ.
ಸೌಥಾಂಪ್ಟನ್ ನಲ್ಲಿ ನ್ಯೂಜಿಲೆಂಡ್ ವಿರುದ್ಧ ಜೂನ್ 18ರಿಂದ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಆರಂಭಗೊಳ್ಳಲಿದೆ. ಟೆಸ್ಟ್ ಚಾಂಪಿಯನ್ಶಿಪ್ ಬೆನ್ನಲ್ಲೇ ಇಂಗ್ಲೆಂಡ್ನಲ್ಲಿ ಆಗಸ್ಟ್ 4ರಿಂದ ಸೆಪ್ಟೆಂಬರ್ 14ರವರೆಗೆ 5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ ಆಡಲಿದೆ.
ಆಲ್ ರೌಂಡರ್ ರವೀಂದ್ರ ಜಡೇಜಾ, ಮಧ್ಯಮ ವೇಗಿಗಳಾದ ಮೊಹಮ್ಮದ್ ಶಮಿ ಮತ್ತು ಉಮೇಶ್ ಯಾದವ್ ಟೆಸ್ಟ್ ತಂಡಕ್ಕೆ ಮರಳಿದ್ದಾರೆ. ಹಾರ್ದಿಕ್ ಪಾಂಡ್ಯ, ಪೃಥ್ವಿ ಶಾ ಹಾಗೂ ಕುಲದೀಪ್ ಯಾದವ್ ಹಾಗೂ ಭುವನೇಶ್ವರ್ ಕುಮಾರ್ ಹೊರಗುಳಿದಿದ್ದಾರೆ. ಶಿಖರ್ ಧವನ್ ಅವರನ್ನು ಕೈಬಿಡಲಾಗಿದೆ.
ಮೀಸಲು ಆಟಗಾರರಾಗಿ ಅಭಿಮನ್ಯು ಈಶ್ವರನ್, ಪ್ರಸಿದ್ಧ ಕೃಷ್ಣ, ಆವೇಶ್ ಖಾನ್, ಅರ್ಜಾನ್ ನಾಗ್ವಾಸವಲ್ಲ ಸ್ಥಾನ ಪಡೆದಿದ್ದು, ಕೆ.ಎಲ್ ರಾಹುಲ್ ಹಾಗೂ ವೃದ್ಧಿಮಾನ್ ಸಾಹಾ ಗಾಯದಿಂದ ಚೇತರಿಸಿಕೊಂಡು ಫಿಟ್ನೆಸ್ ಸಾಬೀತುಪಡಿಸಿದರೆ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ.
ಭಾರತ ತಂಡ: ವಿರಾಟ್ ಕೊಹ್ಲಿ(ನಾಯಕ), ಅಜಿಂಕ್ಯ ರಹಾನೆ, ರೋಹಿತ್ ಶರ್ಮಾ, ಶುಭಮನ್ ಗಿಲ್, ಮಯಾಂಕ್ ಅಗರವಾಲ್, ಚೇತೇಶ್ವರ್ ಪೂಜಾರ, ಹನುಮ ವಿಹಾರಿ, ರಿಷಭ್ ಪಂತ್, ಆರ್.ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ಜಸ್ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್.