ಬೆಳಗಾವಿ: ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಬೆಳಗಾವಿ ಉಪ ಚುನಾವಣಾ ಪ್ರಚಾರದ ವೇಳೆ ಮಾತನಾಡಿದ ಅವರು, ಸಾರಿಗೆ ನೌಕರರು ಮುಷ್ಕರ ಬಿಟ್ಟು ಮಾತುಕತೆಗೆ ಬರಬೇಕು. ನಾನು ಯಾರ ಜೊತೆಗೆ ಬೇಕಾದರು ಮಾತನಾಡಲು ಸಿದ್ದನಿದ್ದೇನೆ. ಎಷ್ಮಾ ಜಾರಿಗೊಳಿಸುವ ಕುರಿತು ಚರ್ಚಿಸಲಾಗುತ್ತದೆ. ಸನ್ನಿವೇಶ ನೋಡಿಕೊಂಡು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.
ಸಾರಿಗೆ ಮುಷ್ಕರವನ್ನು ಕೆಲವರು ಸ್ವಾರ್ಥಕ್ಕಾಗಿ ನಡೆಸಲಾಗುತ್ತದೆ ಎಂದು ಕಿಡಿಕಾರಿದ ಸಿಎಂ ಯಡಿಯೂರಪ್ಪ, ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಗಾಗಲೇ ಈಡೇರಿಸಿದ್ದೇವೆ. ಹಟ ಮಾಡುವುದು ಸರಿಯಲ್ಲ. ಸಾರಿಗೆ ನೌಕರರ ಮುಷ್ಕರದಿಂದ ಸಾರ್ವಜನಿಕರಿಗೆ ತುಂಬಾ ತೊಂದರೆ ಆಗುತ್ತದೆ ಎಂದು ಕಿವಿಮಾತು ಹೇಳಿದರು.