ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕೆ.ಪಿ.ಸಿ.ಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವರಾದ ರಾಮಲಿಂಗಾ ರೆಡ್ಡಿ, ಎಂ ಬಿ ಪಾಟೀಲ್, ಆರ್ ವಿ ದೇಶಪಾಂಡೆ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸಾಥ್ ನೀಡಿದರು.
ಸಾಮಾನ್ಯವಾಗಿ ಹೋಳಿ ಹುಣ್ಣಿಮೆ ಮರು ದಿನವನ್ನು ಕರಿ ದಿನ ಎಂದು ಕರೆಯಲಾಗುತ್ತದೆ. ಈ ದಿನದಂದು ಶುಭ ಕಾರ್ಯ ಮಾಡಲು ಬಹುತೇಕವನ್ನು ಇಚ್ಚೆ ತೋರುವುದಿಲ್ಲ. ಆದರೆ ಮೌಢ್ಯಗಳ ವಿರುದ್ಧ ಸದಾ ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡು ಬಂದಿರುವ ಸತೀಶ್ ಜಾರಕಿಹೊಳಿ ಇದೇ ದಿನವನ್ನು ಆಯ್ಕೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಕೇಂದ್ರ ಸಚಿವರಾಗಿದ್ದ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಎಪ್ರಿಲ್ 17ರಂದು ಚುನಾವಣೆ ನಡೆಯಲಿದೆ. ಮೇ.2ರಂದು ಮತ ಎಣಿಕೆ ನಡೆಯಲಿದೆ.