ಬಿಜೆಪಿ ಸರಕಾರದಿಂದ ಉತ್ತರ ಕರ್ನಾಟಕಕ್ಕೆ ಅನ್ಯಾಯ: ಡಿ.ಕೆ.ಶಿವಕುಮಾರ ಆರೋಪ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಉತ್ತರ ಕರ್ನಾಟಕಕ್ಕೆ ಅನ್ಯಾಯ ಮಾಡುತ್ತಿದೆ. ಬೆಳಗಾವಿಯಲ್ಲಿ ಸುವರ್ಣ ಸೌಧವನ್ನು ಯಾಕೆ ಕಟ್ಟಿದ್ದೇವೆ ಎಂಬುದನ್ನ ಸರ್ಕಾರ ಮರೆತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದರು.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಬೆಳಗಾವಿ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸದೇ ಉತ್ತರ ಕರ್ನಾಟಕದ ಜನರಿಗೆ ಅನ್ಯಾಯ ಮಾಡಲಾಗುತ್ತಿದೆ. ಇದರಿಂದ ಆ ಭಾಗದ ಜನರಿಗೆ ಅಭಿವೃದ್ಧಿಗೆ ಹಿನ್ನಡೆಯಾಗುತ್ತಿದೆ. ಆ ಭಾಗದಲ್ಲಿ ಅಭಿವೃದ್ಧಿ ಬಗ್ಗೆ ಚಿಂತನೆ ಮಾಡಲು ಬಜೆಟ್ ಅಧಿವೇಶವನ್ನು ಬೆಳಗಾವಿಯಲ್ಲಿ ಮಾಡಬೇಕು ಎಂದು ಒತ್ತಾಯಿಸಿದರು.
ಸುವರ್ಣಸೌಧ ಯಾಕೆ ಮಾಡಲಾಗಿದೆ ಎಂಬುದನ್ನು ಸರ್ಕಾರ ಮರೆತಿದೆ. ಕಾಂಗ್ರೆಸ್ ಪಕ್ಷದಿಂದ ಬಜೆಟ್ ಅಧಿವೇಶನವನ್ನು ಬೆಳಗಾವಿಯಲ್ಲಿ ಮಾಡಿ ಎಂದು ಒತ್ತಾಯಿಸಿದ್ದೇವೆ. ಆದರೆ, ಬಜೆಟ್ ಅಧಿವೇಶನ ಬಳಿಕ ಮುಂದಿನ ಅಧಿವೇಶನ ಬೆಳಗಾವಿಯಲ್ಲಿ ಮಾಡುತ್ತೇವೆ ಸರಕಾರ ಹೇಳುತ್ತಿದೆ ಎಂದ. ಡಿ.ಕೆ.ಶಿವಕುಮಾರ ಅವರು, ಕೇಂದ್ರ ಸರ್ಕಾರ ಮಂಡಿಸುತ್ತಿರುವ ಬಜೆಟ್ ಬಗ್ಗೆ ಯಾವುದೇ ನಿರೀಕ್ಷೆಯಿಲ್ಲ. ಕೊರೊನಾ ಸಂದರ್ಭದಲ್ಲಿ ಆದ ನಷ್ಟಕ್ಕೆ ಪರಿಹಾರ ಸಿಗುವ ಲಕ್ಷಣವೂ ಕಾಣುತ್ತಿಲ್ಲ ಎಂದು ತಿಳಿಸಿದರು.