ಬೆಂಗಳೂರು : ಕೊರೊನಾ ಸೋಂಕಿನಿಂದ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೊರೊನಾ ಸೋಂಕು ಹಿನ್ನಲೆಯಲ್ಲಿ ಏಪ್ರಿಲ್ 16ರಂದು ಸಿಎಂ ಯಡಿಯೂರಪ್ಪ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಸೂಕ್ತ ಚಿಕಿತ್ಸೆ ಬಳಿಕ ಗುಣಮುಖರಾಗಿರುವ ಮುಖ್ಯಮಂತ್ರಿಗಳಿಗೆ ಈಗ ಕೋವಿಡ್ ನೆಗೆಟಿವ್ ಬಂದಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಆಸ್ಪತ್ರೆಯಿಂದ ನೇರವಾಗಿ ತಮ್ಮ ಅಧಿಕೃತ ನಿವಾಸ ಕಾವೇರಿಗೆ ಯಡಿಯೂರಪ್ಪ ತೆರಳಿದ್ದು, ಇದಕ್ಕೂ ಮುನ್ನ ಮಾತನಾಡಿದ ಅವರು, ಕೊರೊನಾ ಸೋಂಕು ಎಲ್ಲೆಡೆ ವೇಗವಾಗಿ ಹಬ್ಬುತ್ತಿದೆ. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿ, ದೈಹಿಕ ಅಂತರ ಕಾಯ್ದುಕೊಳ್ಳಿ, ಅನಗತ್ಯವಾಗಿ ಹೊರಗಡೆ ಓಡಾಡಬೇಡಿ. ಕರ್ಫ್ಯೂ ನಿಯಮಗಳನ್ನು ಪಾಲಿಸಿ ಎಂದರು.
ನಾನು ಈಗಾಗಲೇ ಅಗತ್ಯ ವಿಶ್ರಾಂತಿ ಪಡೆದಿದ್ದೇನೆ, ವೈದ್ಯರ ಸಲಹೆಯಂತೆ ನಡೆದುಕೊಂಡಿದ್ದೇನೆ, ಇಂದು ಸಂಜೆ ಸಭೆಯಲ್ಲಿ ಪಾಲ್ಗೊಳ್ಳಲಿದ್ದೇನೆ ಎಂದರು.