ಕೊರೊನಾ 2ನೇ ಅಲೆಗೆ ರಾಜ್ಯ ತತ್ತರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಇಂದು ಸಂಜೆ ಕಠಿಣ ನಿಯಮ ಜಾರಿಗೊಳಿಸುವ ಕುರಿತು ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಮುಂದಿನ ಆರು ವಾರಗಳು ಕರ್ನಾಟಕದ ಪಾಲಿಗೆ ನಿರ್ಣಾಯಕ ಆಗಿರುವುದರಿಂದ ಸಚಿವರು ಹಾಗೂ ವಲಯ ಉಸ್ತುವಾರಿಗಳೊಂದಿಗೆ ಮುಖ್ಯಮಂತ್ರಿ ಬೆಂಗಳೂರಿನ ಗೃಹ ಕಚೇರಿ ಕೃಷ್ಣದಲ್ಲಿ ಸಂಜೆ 5 ಗಂಟೆಗೆ ಸಭೆ ಕರೆದಿದ್ದು, ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಈಗಾಗಲೇ ಕಂಟೈನ್ ಮೆಂಟ್ ಝೋನ್ ಮತ್ತು ಮಾಸ್ಕ್ ಧರಿಸದವರಿಗೆ 250 ರೂ. ದಂಡ ವಿಧಿಸಲಾಗುತ್ತಿದೆ. ಆದರೆ ಇಂದು ಮತ್ತಷ್ಟು ಕಠಿಣ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದ್ದು, ಮಾರುಕಟ್ಟೆ, ದೇವಸ್ಥಾನ, ಶಾಲೆ-ಕಾಲೇಜು, ಸಿನಿಮಾ ಕ್ಷೇತ್ರಗಳಿಗೆ ಕಡಿವಾಣ ಹಾಕುವ ಸಾಧ್ಯತೆ ಇದೆ.
ರಾಜ್ಯದಲ್ಲಿ ಭಾನುವಾರ 3000ಕ್ಕೂ ಅಧಿಕ ಸೋಂಕು ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರದ ಪರಿಸ್ಥಿತಿ ಇಲ್ಲೂ ನಿರ್ಮಾಣವಾಗಬಹುದು ಎಂಬ ಆತಂಕ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಇಂದು ಸಂಜೆ 5 ಗಂಟೆಗೆ ಸಭೆ ಸೇರಿ ಕ್ರಮ ಕೈಗೊಳ್ಳಲಿದೆ ಎಂದು ಹೇಳಲಾಗಿದೆ.
ಸಚಿವರು ಹಾಗೂ ತಾಂತ್ರಿಕ ಸಲಹಾ ಸಮಿತಿ ಅಭಿಪ್ರಾಯ ಪಡೆದು ಸೂಕ್ತ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಈಗಾಗಲೇ ಆರೋಗ್ಯ ಸಚಿವ ಕೆ.ಸುಧಾಕರ್ 1ರಿಂದ 9ನೇ ತರಗತಿವರೆಗೂ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೇ ಉತ್ತೀರ್ಣ ಮಾಡುವ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.