ಹಾಸನ: ಮೇಕೆಗೆ ನೀರು ಕುಡಿಸಲು ತೆರಳುತ್ತಿದ್ದ ವೃದ್ದೆಯನ್ನು ಕೊಲೆ ಮಾಡಿ ನಂತರ ದೇಹವನ್ನು ಮಣ್ಣಿನಲ್ಲಿ ಹೂತುಹಾಕಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಾಲ್ತೊರೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಲಕ್ಷ್ಮಮ್ಮ (50) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ.
ನಿನ್ನೆ ಮನೆಯಿಂದ ಜಮೀನಿಗೆ ತೆರಳಿದ್ದ ಮಹಿಳೆ ಮನೆಗೆ ವಾಪಾಸ್ ಬಂದಿರಲಿಲ್ಲ. ಇಂದು ಗ್ರಾಮಸ್ಥರೆಲ್ಲಾ ಸೇರಿ ಹುಡುಕಾಟ ನಡೆಸುತ್ತಿದ್ದ ವೇಳೆ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ. ಒಡವೆಗಾಗಿಯೇ ಕೊಲೆ ಮಾಡಲಾಗಿದೆ ಎಂದು ಶಂಕಿಸಲಾಗಿದೆ.
ಘಟನಾ ಸ್ಥಳಕ್ಕೆ ಶ್ವಾನದಳ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬೇಲೂರು ತಹಸೀಲ್ದಾರ್ ನಟೇಶ್ ಹಾಗೂ ಉಪವಿಭಾಗಾಧಿಕಾರಿ ಸಮ್ಮುಖದಲ್ಲಿ ಶವ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಹಾಸನ ಜಿಲ್ಲಾಸ್ಪತ್ರೆಗೆ ಕಳುಹಿಸಲಾಗಿದೆ. ಹಳೇಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಗಳಿಗೆ ಪೊಲೀಸರು ಬಲೆ ಬೀಸಿದ್ದಾರೆ.