ಕಲಬುರ್ಗಿ : ಮಾಜಿ ಸಚಿವ, ರಾಜ್ಯಸಭೆ ಮಾಜಿ ಸದಸ್ಯ ಕೆ.ಬಿ.ಶಾಣಪ್ಪ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು. ಕೆಲ ದಿನಗಳ ಹಿಂದೆ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ.
ಮೂಲತಃ ಚಿತ್ತಾಪುರ ತಾಲೂಕಿನ ರಾವೂರ ಗ್ರಾಮದ ಶಾಣಪ್ಪ ಅವರು ಕಲಬುರ್ಗಿ ಭಾಗದ ಪ್ರಭಾವಿ ದಲಿತ ನಾಯಕರಾಗಿದ್ದರು. ಅಲ್ಲದೇ, ವಾಡಿಯ ಎಸಿಸಿ ಸಿಮೆಂಟ್ ಕಾರ್ಖಾನೆಯ ಕಾರ್ಮಿಕ ಮುಖಂಡರಾಗಿದ್ದ ಶಾಣಪ್ಪ ಅಂದಿನ ಶಹಾಬಾದ್ ವಿಧಾನಸಭಾ ಕ್ಷೇತ್ರದಿಂದ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ)ದಿಂದ ಸ್ಪರ್ಧಿಸಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.
ಜೆ.ಹೆಚ್. ಪಟೇಲ್ ಸಂಪುಟದಲ್ಲಿ ಅಬಕಾರಿ ಸಚಿವರಾದರು. ಆ ಸಂದರ್ಭ, ಶಾಸಕರಾಗಿಲ್ಲದ ಕಾರಣ ಅವರನ್ನು ವಿಧಾನಪರಿಷತ್‌ಗೆ ನಾಮನಿರ್ದೇಶನ ಮಾಡಲಾಗಿತ್ತು. ನಂತರ ಬಿಜೆಪಿಗೆ ಸೇರ್ಪಡೆಯಾಗಿ ರಾಜ್ಯಸಭೆಗೆ ಆಯ್ಕೆಯಾಗಿದ್ದರು. 2018ರಲ್ಲಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು.
ಅವರಿಗೆ ಪತ್ನಿ, ಇಬ್ಬರು ಪುತ್ರರು ಮತ್ತು ಮೂವರು ಪುತ್ರಿಯರು ಇದ್ದಾರೆ.