ಬೆಂಗಳೂರು : ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಖ್ಯಾತ ಕವಿ ಡಾ.ಸಿದ್ದಲಿಂಗಯ್ಯ(67) ಚಿಕಿತ್ಸೆ ಫಲಕಾರಿಯಾಗದೇ, ಸಾವನ್ನಪ್ಪಿದ್ದಾರೆ. ಈ ಮೂಲಕ ಕನ್ನಡ ಸಾಹಿತ್ಯ ಲೋಕದ ಕೊಂಡಿಯೊಂದು ಕಳಚಿದಂತೆ ಆಗಿದೆ.
ಮೇ.2 ರಂದು ಕೆಮ್ಮ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದಂತ ಸಾಹಿತಿ ಡಾ.ಸಿದ್ದಲಿಂಗಯ್ಯ ಅವರಿಗೆ ಕೊರೊನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿತ್ತು. ಹೀಗಾಗಿ ಚಿಕಿತ್ಸೆಗಾಗಿ ರಂಗದೊರೆ ಆಸ್ಪತ್ರೆ, ಅಪೋಲೋ ಆಸ್ಪತ್ರೆ ಸೇರಿದಂತೆ ಅನೇಕ ಆಸ್ಪತ್ರೆಗಳಿಗೆ ಸುತ್ತಾಡಿದ್ದರೂ ಬೆಡ್ ಸಿಕ್ಕಿರಲಿಲ್ಲ. ಅಂತಿಮವಾಗಿ ಡಿಸಿಎಂ ಡಾ.ಸಿಎನ್ ಅಶ್ವತ್ಥ್ ನಾರಾಯಣಗೆ ವಿಷಯ ತಿಳಿಯುತ್ತಿದ್ದಂತೆ ಕರೆ ಮಾಡಿ, ಬೆಡ್ ವ್ಯವಸ್ಥೆ ಮಾಡಿದ್ದರಿಂದಾಗಿ ಮೇ.3ರಂದು ರಂಗದೊರೆ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿನ ಚಿಕಿತ್ಸೆಗಾಗಿ ಬೆಡ್ ದೊರೆತು ಚಿಕಿತ್ಸೆ ಪಡೆಯುತ್ತಿದ್ದರು.
ಮತ್ತೆ ಹೆಚ್ಚಿನ ಚಿಕಿತ್ಸೆಗಾಗಿ ರಂಗದೊರೆ ಆಸ್ಪತ್ರೆಯಿಂದ ಕಳೆದ ಸೋಮವಾರದಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.
ರಾಮಗನರ ಜಿಲ್ಲೆಯ ಮಾಗಡಿ ತಾಲೂಕಿನ ಮಂಚನಹಳ್ಳಿಯಲ್ಲಿ 1954ರಲ್ಲಿ ಜನಿಸಿದ್ದ ಸಿದ್ದಲಿಂಗಯ್ಯ ಅವರು, ದಲಿತ ಕವಿ ಎಂದೇ ಪ್ರಸಿದ್ದಿಯಾಗಿದ್ದರು. ದಲಿತ ಹೊರಾಟ ಮತ್ತು ಸಾಮಾಜಿಕ ಸಮಾನತೆಗಾಗಿ ಕಾವ್ಯ ಸಾಹಿತ್ಯಗಳನ್ನು ರಚಿಸಿದ್ದರು. ಕಾವ್ಯ, ನಾಟಕ, ಪ್ರಬಂಧ, ವಿಮರ್ಶೆ, ಸಂಶೋಧನೆ, ಆತ್ಮಕಥನ ಮುಂತಾದ ಪ್ರಕಾರಗಳಲ್ಲಿ ಸಾಹಿತ್ಯ ರಚಿಸಿದ್ದರು.