ಬೆಂಗಳೂರು: ಲಾಕ್ ಡೌನ್ನಿಂದ ಜೀವನ ನಡೆಸಲು ಸಮಸ್ಯೆ ಉಂಟಾಗಿರುವ ವರ್ಗಕ್ಕೆ ಸರ್ಕಾರ ಪರಿಹಾರ ಘೋಷಣೆ ಮಾಡಬೇಕು, ಮನೆಯಿಂದ ಹೊರಗೆ ಬರುವ ಜನರ ಮೇಲೆ ದರ್ಪ ತೋರಿಸುವುದನ್ನು ನಿಲ್ಲಿಸಬೇಕು ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಲಾಕ್ ಡೌನ್ ಅಲ್ಲದ ಕಠಿಣ ಲಾಕ್ ಡೌನ್, ಜನ ಹೊರಗೆ ಬಂದರೆ ದನಕ್ಕೆ ಬಡಿದಂತೆ ಬಡಿಯುವ ಲಾಕ್ ಡೌನ್ ಇಂದಿನಿಂದ ಜಾರಿಗೆ ಬರಲಿದೆ. ಜನಸಂಚಾರ ತಡೆಯುವುದೇ ಲಾಕ್ ಡೌನ್ ಎಂದು ಭಾವಿಸಿರುವ ಸರ್ಕಾರ ಸಂಕಷ್ಟದಲ್ಲಿ ನಾಗರಿಕರನ್ನು ಮರೆತಿರುವುದು ದುರಂತ. ನಾವು ಸೂಚಿಸಿದ ಲಾಕ್ ಡೌನ್ ಇದಾಗಿರಲಿಲ್ಲ. ನಾವು ಹೇಳಿದ್ದು ಜನಹಿತದ ಲಾಕ್ ಡೌನ್ ಆಗಿತ್ತು ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
ಲಾಕ್ ಡೌನ್ ಮಾಡಿ ಜನರ ಜೀವ ಉಳಿಸಿ ಎಂದು ನಾನು ಮೊದಲೇ ಹೇಳಿದ್ದೆ. ಹಾಗೆ ಹೇಳುವಾಗ ಲಾಕ್ ಡೌನ್ ನಿಂದ ಜನ ಜೀವನಕ್ಕೆ ಆಗುವ ತೊಂದರೆಗಳಿಗೆ ಪರಿಹಾರ ಕ್ರಮಗಳಿರಬೇಕು, ಜನರ ಅಗತ್ಯವನ್ನು ಸರ್ಕಾರ ಭರಿಸಬೇಕೆಂದು ಹೇಳಿದ್ದೆ. ಆದರೆ, ಲಾಕ್ ಡೌನ್ ಸಂದರ್ಭದಲ್ಲಿ ನೀಡಬೇಕಾದ ಪರಿಹಾರ ಕ್ರಮಗಳಿಂದ ವಿಮುಖವಾಗಿರುವ ಸರ್ಕಾರ ಬೇಜವಾಬ್ದಾರಿತನ ತೋರಿದೆ ಎಂದಿದ್ದಾರೆ.
ಜನರಿಗೆ ಎಲ್ಲಿ ಪರಿಹಾರ ನೀಡಬೇಕಾಗುತ್ತದೆಯೋ, ಜೀವನ ನಿರ್ವಹಣೆಗೆ ನೆರವು ನೀಡಬೇಕಾಗಿ ಬರುತ್ತದೆಯೋ ಎಂಬ ದುರಾಲೋಚನೆ ಮಾಡಿರುವ ಸರ್ಕಾರ ಲಾಕ್ ಡೌನ್ ಎಂಬ ಪದವನ್ನು ಧೈರ್ಯದಿಂದ ಹೇಳುತ್ತಲೇ ಇಲ್ಲ. ಕಠಿಣ ನಿಯಮ ಎಂದು ಹೇಳಿ ಲಾಕ್ ಡೌನ್ ನಿಂದ ದೂರ ನಿಂತಿದೆ. ಕೇಂದ್ರವೂ ಇದೇ ಕುತಂತ್ರದ ನಡೆಯನ್ನು ಅನುಸರಿಸಿ ಜವಾಬ್ದಾರಿಯಿಂದ ನುಣುಚಿಕೊಂಡಿದೆ ಎಂದು ಕಿಡಿ ಕಾರಿದ್ದಾರೆ.
ಲಾಕ್ ಡೌನ್ ಎಂದರೆ ಜನ ಹೊರ ಹೋಗಲಾಗದ ಪರಿಸ್ಥಿತಿ. ಬದುಕಿನ ಅಗತ್ಯವನ್ನು ದುಡಿದುಕೊಳ್ಳಲಾಗದ ದುಸ್ಥಿತಿ. ಸರ್ಕಾರವೇ ಇದರ ಹೊಣೆಗಾರ, ಅದಕ್ಕೆ ಸರ್ಕಾರವೇ ಪರಿಹಾರ ನೀಡಬೇಕು ಎಂಬುದೂ ನನ್ನ ನಿಲುವು, ಸಲಹೆ. ಸರ್ಕಾರ ಸಂಪೂರ್ಣ ಲಾಕ್ ಡೌನ್ ಘೋಷಿಸಬೇಕಿತ್ತು ಮತ್ತು ಪರಿಹಾರ ನೀಡಬೇಕಿತ್ತು. ಆದರೆ ಈವರೆಗೆ ಪರಿಹಾರ ಪ್ಯಾಕೇಜ್ ನ ಮಾತೇ ಇಲ್ಲ ಎಂಬುದಾಗಿ ಹೇಳಿದ್ದಾರೆ.
ಮಹಾರಾಷ್ಟ್ರ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಕೇಂದ್ರ ಸರ್ಕಾರಕ್ಕೆ ಕಾಯದೇ ಲಾಕ್ ಡೌನ್ ಮಾಡಿವೆ. ಜನರಿಗೆ ಆಹಾರ ಸೇರಿದಂತೆ ಪರಿಹಾರ ಘೋಷಿಸಿವೆ. ಆಂಧ್ರದಲ್ಲಿ ಸೋಂಕಿತರಿಗೆ ಉಚಿತ ಚಿಕಿತ್ಸೆ ಸಿಗುತ್ತಿದೆ. ಇದು ಸರ್ಕಾರಗಳ ಜವಾಬ್ದಾರಿಯುತ ನಡೆ. ಆದರೆ, ಜವಾಬ್ದಾರಿಯಿಂದ ನುಣುಚಿಕೊಳ್ಳುವ ಕೇಂದ್ರದ ದುರ್ನಡೆಯನ್ನು ರಾಜ್ಯ ಅನುಸರಿಸಬಾರದು ಎಂದು ಕಿಡಿಕಾರಿದ್ದಾರೆ.