ಬೆಂಗಳೂರು : ಕೋವಿಡ್ ನಿರ್ವಹಣೆಯಲ್ಲಿ ಆಶಾ ಕಾರ್ಯಕರ್ತರ ಪಾತ್ರ ದೊಡ್ಡದಾಗಿದೆ. ಹಾಗಾಗಿ ಆಶಾ ಕಾರ್ಯಕರ್ತರಿಗೆ ಗೌರವ ಧನ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ಆಶಾ ಕಾರ್ಯಕರ್ತರು ಪ್ರಾಣದ ಹಂಗು ತೊರೆದು ಕೆಲಸ ಮಾಡುತ್ತಿದ್ದಾರೆ. 3 ತಿಂಗಳಿಂದ ಆಶಾ ಕಾರ್ಯಕರ್ತೆಯರಿಗೆ ಗೌರವಧನ ನೀಡಿಲ್ಲ. ಸಂಬಳವನ್ನೆ ನಂಬಿರುವ ಅವರ ಬದುಕು ದುಸ್ಥರವಾಗಿದೆ. ಆಶಾ ಕಾರ್ಯಕರ್ತೆಯರಿಗೆ ಗೌರವ ಧನದ ಜೊತೆಗೆ ತಲಾ 3 ಸಾವಿರ ಪ್ರೋತ್ಸಾಹಧನ ನೀಡುವುದಾಗಿ ಘೋಷಿಸಿದ್ದ ಸರ್ಕಾರ, ಶೇಕಡಾ 50ರಷ್ಟು ಮಂದಿಗೆ ಕೊಟ್ಟು ಉಳಿದವರಿಗೆ ವಂಚಿಸಿದೆ ಎಂದರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
16 ಮಂದಿ ಆಶಾ ಕಾರ್ಯಕರ್ತೆಯರು ಈ ವರೆಗೆ ಸಾವನ್ನಪ್ಪಿದ್ದಾರೆ. ಸಾವಿರಕ್ಕೂ ಅಧಿಕ ಮಂದಿ ಕೊರೋನಾ ವೈರಸ್ ಸೋಂಕಿತರಾಗಿದ್ದಾರೆ. ಮಾಸಿಕ ಗೌರವಧನ ಕೊಡುವಲ್ಲಿ ಸೋತಿರುವ ರಾಜ್ಯ ಸರ್ಕಾರ ಆಶಾ ಕಾರ್ಯಕರ್ತೆಯರ ಬದುಕಿನೊಂದಿಗೆ ಚೆಲ್ಲಾಟವಾಡುತ್ತಿದೆ ಎಂದರು.
ಗೌರವಧನ ಕೊಡಲು ಮೀನಾಮೇಷ ಎಣಿಸುತ್ತಿರುವ ರಾಜ್ಯ ಸರ್ಕಾರ, 1250 ಕೋಟಿ ರೂಗಳ ಪ್ಯಾಕೇಜನ್ನು ಅನುಷ್ಠಾನಗೊಳಿಸುತ್ತದೆ . ಇದೊಂದು ಭ್ರಮೆ ಅಲ್ಲದೆ ಮತ್ತೇನು? ಎಂದು ಸರ್ಕಾರ ವಿರುದ್ದ ಗುಡುಗಿದ್ದಾರೆ.