ಮೇ 10ರಂದು ಬೆಳಿಗ್ಗೆ 6 ಗಂಟೆಯಿಂದ ಮೇ 24 ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ಶುಕ್ರವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 14 ದಿನಗಳ ಲಾಕ್ ಡೌನ್ ಅವಧಿಯಲ್ಲಿ ಬೆಳಿಗ್ಗೆ 10ರಿಂದ 10 ಗಂಟೆಯವರೆಗೆ ಅಗತ್ಯ ವಸ್ತುಗಳಾದ ಹಾಲು, ರೇಷನ್ ಅಂಗಡಿ, ತರಕಾರಿ ಮಾರಾಟ ಮತ್ತು ಖರೀದಿಗೆ ಅವಕಾಶ ನೀಡಲಾಗಿದೆ ಎಂದರು.
ಅಂತರ್ ಜಿಲ್ಲಾ ಸಂಚಾರ ನಿರ್ಬಂಧಿಸಲಾಗಿದ್ದು, ಹೋಟೆಲ್, ಬಾರ್ ಮತ್ತು ದಿನಸಿ, ಮಾಂಸದಂಗಡಿಗಳಲ್ಲಿ ಪಾರ್ಸೆಲ್ ಗೆ ಅವಕಾಶ ಕಲ್ಪಿಸಲಾಗಿದೆ. ಬೆಳಿಗ್ಗೆ 10 ಗಂಟೆಯಿಂದ ಮರುದಿನ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ವಾಹನ ಸಂಚಾರ ಸಂಪೂರ್ಣ ನಿರ್ಬಂಧಿಸಲಾಗಿದ್ದು, ಯಾರೇ ಓಡಾಡಿದರೂ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.
ಮದುವೆ ಸಮಾರಂಭಗಳಲ್ಲಿ 50ಕ್ಕಿಂತ ಹೆಚ್ಚು ಜನರು ಪಾಲ್ಗೊಳ್ಳುವಂತಿಲ್ಲ. ರಸ್ತೆ ಕಾಮಗಾರಿಗಳಿಗೆ ಅಡ್ಡಿ ಇರುವುದಿಲ್ಲ. ಆದರೆ ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ಕೆಲಸ ಮಾಡಬಹುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ರಾಜ್ಯದಲ್ಲಿ ಯಾವುದೇ ಬಸ್, ಕ್ಯಾಬ್, ಆಟೋ ಮುಂತಾದ ಯಾವುದೇ ಸಾರಿಗೆ ಸೇವೆ ಇರುವುದಿಲ್ಲ. ಗಾರ್ಮೆಂಟ್ಸ್, ಕಾರ್ಖಾನೆ, ಖಾಸಗಿ ಕೆಲಸಗಳು ತೆರೆಯುವಂತಿಲ್ಲ. 10 ಗಂಟೆಯ ನಂತರ ಯಾರೇ ಮನೆಯಿಂದ ಹೊರಗೆ ಬಂದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.