ಬೆಂಗಳೂರು : ಚಾಮರಾಜನಗರ ಆಸ್ಪತ್ರೆಯಲ್ಲಿ ರೋಗಿಗಳ ಸಾವಿನ ಪ್ರಕರಣ ಕುರಿತು ಸಮಗ್ರ ತನಿಖೆ ನಡೆಸಿ ವರದಿ ನೀಡುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸೂಚನೆ ನೀಡಿರುವುದಾಗಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತಣಾಡಿದ ಅವರು, ಚಾಮರಾಜನಗರದಲ್ಲಿ ಆಕ್ಸಿಜನ್ ಸಿಗದ ಹಿನ್ನೆಲೆಯಲ್ಲಿ ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಇದೆ. ಆದರೆ ಇವರ ಸಾವಿಗೆ ನಿಜವಾಗಿಯೂ ಇದ್ದ ಕಾರಣ ಏನು ಎಂಬುದರ ಕುರಿತು ತನಿಖೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ. ಇದು ಅತ್ಯಂತ ದುಃಖಕರ ಸಂಗತಿ. ಈ ಘಟನೆ ಸಂಭವಿಸಬಾರದಾಗಿತ್ತು ಎಂದು ವಿಷಾದ ವ್ಯಕ್ತಪಡಿಸಿದರು.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ. ಪ್ರಕರಣದ ಕುರಿತು ಸತ್ಯಾಸತ್ಯತೆ ಏನು ಎಂಬುದನ್ನು ತಿಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ವರದಿ ನೀಡಿದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.