- ವರದಿ: ಹನುಮಂತು ದುರ್ಗದ
ಬೆಂಗಳೂರು: ಪಕ್ಷೇತರರಾಗಿ ಹೊಸಕೋಟೆ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಶಾಸಕ ಶರತ್ ಬಚ್ಚೇಗೌಡ ಅವರು, ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಕೊನೆಗೂ ಮುಹೂರ್ತ ನಿಗದಿ ಆಗಿದೆ. ಇದೇ ಫೆಬ್ರವರಿ 25ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ.
ಕಳೆದ ಕೆಲ ತಿಂಗಳುಗಳಿಂದ ಇವರು ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರೆ ಎಂಬ ವಿಚಾರ ಬಹಳ ಚರ್ಚೆಗೆ ಗ್ರಾಸವಾಗಿತ್ತು. ರಾಜ್ಯ ಕಾಂಗ್ರೆಸ್ ನಾಯಕರ ಜೊತೆ ಹಲವು ಸುತ್ತಿನ ಚರ್ಚೆಯ ಬಳಿಕ ಇದೀಗ ಶರತ್ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆಯಾಗುವ ದಿನಾಂಕ ನಿಗದಿಯಾಗಿದೆ. ಫೆ.25 ಕ್ಕೆ ಕಾಂಗ್ರೆಸ್ ಪಕ್ಷವನ್ನು ಶಾಸಕ ಶರತ್ ಬಚ್ಚೇಗೌಡ ಸೇರ್ಪಡೆ ಆಗಲಿದ್ದಾರೆಂದು ಹೇಳಲಾಗುತ್ತಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಸೇರಿದಂತೆ ಪಕ್ಷದ ಇತರೆ ಮುಖಂಡರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ.
2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ, ಹಿಂದೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಎಂ.ಟಿ.ಬಿ ನಾಗರಾಜ್ ವಿರುದ್ಧ ಸೋಲು ಕಂಡಿದ್ದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸಚಿವರಾಗಿದ್ದ ಎಂ.ಟಿ.ಬಿ ನಾಗರಾಜ್, ಬಳಿಕ ನಡೆದ ರಾಜಕೀಯ ಬೆಳವಣಿಗೆಯಲ್ಲಿ, ಶಾಸಕ ಮತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಬಿಜೆಪಿ ಸೇರಿದ್ದರು.
ಹೊಸಕೋಟೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಎಂ.ಟಿ.ಬಿ ನಾಗರಾಜ್, ಬಿಜೆಪಿಯಿಂದ ಟಿಕೆಟ್ ಸಿಗದ ಕಾರಣಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಶರತ್ ಬಚ್ಚೇಗೌಡ ವಿರುದ್ಧ ಪರಾಭವಗೊಂಡಿದ್ದರು. ಆದರೆ, ವಿಧಾನಪರಿಷತ್ ಸದಸ್ಯರಾಗಿ ಬಿಜೆಪಿಯಿಂದ ಆಯ್ಕೆಯಾದ ಎಂ.ಟಿ.ಬಿ ನಾಗರಾಜ್, ಇದೀಗ ಮತ್ತೆ ಸಚಿವರಾಗಿದ್ದಾರೆ.
ಇನ್ನೂ ಜೆಡಿಎಸ್ನ ಹಲವು ಶಾಸಕರು, ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ತುದಿಗಾಲಿನಲ್ಲಿ ನಿಂತಿದ್ದಾರೆ. ಆದರೆ ಸಮಯವನ್ನು ನಿಗದಿ ಆಗಿಲ್ಲ. ಜೆಡಿಎಸ್ ಮಾಜಿ ಶಾಸಕ ಮಧು ಬಂಗಾರಪ್ಪ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಆಗುವುದು ಬಹುತೇಕ ಖಚಿತವಾಗಿದೆ.