ಹಾಸನ: ರಾಜ್ಯದಲ್ಲಿ ಮುಂದಿನ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿರುವಾಗ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ ಎರಡು ವರ್ಷ ನಾನೇ ಸಿಎಂ ಆಗಿರುತ್ತೇನೆ. ಈ ಬಗ್ಗೆ ಜನರಿಗೆ ಭರವಸೆ ನೀಡುತ್ತಿದ್ದೇನೆ. ನನ್ನ ನೇತೃತ್ವದಲ್ಲಿ ರಾಜ್ಯದಲ್ಲಿ ಉತ್ತಮ ಕೆಲಸಗಳಾಗಿವೆ. ಯಡಿಯೂರಪ್ಪನವರೇ ಸಿಎಂ ಆಗಿ ಪೂರ್ಣಾವಧಿ ಮುಗಿಸಬೇಕು ಎಂದು ಅರುಣ್ ಸಿಂಗ್ ಹೇಳಿದ್ದಾರೆ. ಹೀಗಾಗಿ ನನ್ನ ಜವಾಬ್ದಾರಿ ಇನ್ನೂ ಹೆಚ್ಚಾಗಿದೆ. ರಾಜ್ಯದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕೆಲಸಗಳನ್ನು ಮಾಡುವ ಮೂಲಕ ಜನರ ವಿಶ್ವಾಸ ಉಳಿಸಿಕೊಳ್ಳುತ್ತೇನೆ ಎಂದರು.
ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಅವರಿಗೂ ನನ್ನ ಮೇಲೆ ವಿಶ್ವಾಸವಿದೆ. ಈ ನಿಟ್ಟಿನಲ್ಲಿ ನಾನು ರಾಜ್ಯದಲ್ಲಿ ಇನ್ನೂ ಹೆಚ್ಚಿನ ಜನಪರ ಕೆಲಸಗಳನ್ನು ಮಾಡಬೇಕು. ನಾಯಕತ್ವ ಬದಲಾವಣೆ ವಿಚಾರವಾಗಿ ಯಾವುದೇ ಗೊಂದಲಗಳೂ ಇಲ್ಲ ಎಂದು ತಿಳಿಸಿದರು.