ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಪ್ರಸ್ತುತ ನಡೆಯುತ್ತಿದ್ದ ಇಂಡಿಯನ್ ಪ್ರೀಮಿಯರ್ ಲೀಗ್ ಟಿ-20 ಕ್ರಿಕೆಟ್ ಟೂರ್ನಿಯನ್ನು ರದ್ದುಗೊಳಿಸಲಾಗಿದೆ.
ಕೋಲ್ಕತಾ ನೈಟ್ ರೈಡರ್ಸ್, ಚೆನ್ನೈ ಸೂಪರ್ ಕಿಂಗ್ಸ್, ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳ ಹಲವು ಆಟಗಾರರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ದಿಢೀರನೆ ರದ್ದುಗೊಳಿಸಿದೆ.
ಕೆಕೆಆರ್ ತಂಡದ ಸಂದೀಪ್ ವಾರಿಯರ್ ಮತ್ತು ವರುಣ್ ಚಕ್ರವರ್ತಿಗೆ ಕೊರೊನಾ ವೈರಸ್ ಸೋಂಕು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸೋಮವಾರ ನಡೆಯಬೇಕಿದ್ದ ಆರ್ ಸಿಬಿ ಮತ್ತು ಕೆಕೆಆರ್ ನಡುವಣ ಪಂದ್ಯ ರದ್ದುಗೊಳಿಸಲಾಗಿತ್ತು.
ಇದರ ಬೆನ್ನಲ್ಲೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಇಬ್ಬರು ಆಟಗಾರರಿಗೆ ಕೊರೊನಾ ಸೋಂಕು ಕಾಣಿಸಿಕೊಂಡು ಮಂಗಳವಾರ ನಡೆಯಬೇಕಿದ್ದ ಪಂದ್ಯ ಅನುಮಾನ ಇತ್ತು. ಇದರ ನಡುವೆ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪಿನ್ನರ್ ಅಮಿತ್ ಮಿಶ್ರಾ ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡದ ವೃದ್ಧಿಮಾನ್ ಸಾಹ ಅವರಲ್ಲೂ ಕೊರೊನಾ ದೃಢಪಟ್ಟಿತ್ತು.
ಹಲವು ತಂಡಗಳ ಆಟಗಾರರಿಗೆ ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಮಂಗಳವಾರ ಬಿಸಿಸಿಐ ಐಪಿಎಲ್ ಟೂರ್ನಿಯನ್ನು ರದ್ದುಗೊಳಿಸಿದ್ದು, ಮುಂದಿನ ದಿನಾಂಕವನ್ನು ಶೀಘ್ರವಾಗಿ ಪ್ರಕಟಿಸುವುದಾಗಿ ತಿಳಿಸಿದೆ.