ಬೆಂಗಳೂರು: ಮೇ 1ರಿಂದ 18 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯಬಹುದಾಗಿದ್ದು, 18ರಿಂದ 45 ವರ್ಷದವರೆಗಿನ ಎಲ್ಲ ಜನರಿಗೂ ಉಚಿತ ಲಸಿಕೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಘೋಷಣೆ ಮಾಡಿದರು.
ಸಚಿವ ಸಂಪುಟ ಸಭೆ ಮುಕ್ತಾಯಗೊಂಡ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಹಲವು ರಾಜ್ಯಗಳಲ್ಲಿ ಉಚಿತವಾಗಿ ಲಸಿಕೆ ನೀಡುವುದಾಗಿ ಘೋಷಿಸಿದ್ದವು. ಅದೇ ರೀತಿ ಕರ್ನಾಟಕದಲ್ಲೂ ಉಚಿತ ಲಸಿಕೆ ನೀಡಬೇಕು ಎಂದು ಹಲವರು ಒತ್ತಡ ಹಾಕಿದ್ದರು. ಅದರಂತೆ ಈಗ ರಾಜ್ಯ ಸರ್ಕಾರ 18ರಿಂದ 45 ವರ್ಷದವರೆಗಿನ ಜನರಿಗೆ ಉಚಿತವಾಗಿ ಲಸಿಕೆ ನೀಡುವ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದರು.
ಈಗಾಗಲೇ ಹಲವು ರಾಜ್ಯಗಳಲ್ಲಿ ಕೋವಿಡ್ ಲಸಿಕೆ ಉಚಿತವಾಗಿ ನೀಡುವ ಬಗ್ಗೆ ಘೋಷಣೆ ಮಾಡಿವೆ. ಆಂಧ್ರಪ್ರದೇಶ, ಮಹಾರಾಷ್ಟ್ರ, ದೆಹಲಿ, ಜಾರ್ಖಂಡ್, ಗೋವಾ, ಛತ್ತೀಸ್ಗಢ, ಉತ್ತರಪ್ರದೇಶ, ಅಸ್ಸಾಂ, ಮಧ್ಯಪ್ರದೇಶ, ಕೇರಳ, ಬಿಹಾರ ಹಾಗೂ ಸಿಕ್ಕಿಂನಲ್ಲಿ ಉಚಿತವಾಗಿ ಕೋವಿಡ್ ಲಸಿಕೆ ಹಂಚಿಕೆ ಮಾಡುವುದಾಗಿ ಅಲ್ಲಿನ ರಾಜ್ಯ ಸರ್ಕಾರಗಳು ಘೋಷಣೆ ಮಾಡಿವೆ. ಇದರ ಬೆನ್ನಲ್ಲೇ ರಾಜ್ಯದಲ್ಲೂ ಉಚಿತವಾಗಿ ಲಸಿಕೆ ನೀಡುವಂತೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿತ್ತು.