ಬೆಂಗಳೂರು : ಸದ್ಯಕ್ಕೆ ಜೂನ್ 7 ರ ವರೆಗೆ ರಾಜ್ಯದಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ವಿಸ್ತರಣೆ ಮಾಡುವ ಕುರಿತು ಸಿಎಂ ಯಡಿಯೂರಪ್ಪ ಅವರು ಮಂತ್ರಿಮಂಡಲದ ಸದಸ್ಯರೊಂದಿಗೆ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಗೃಹ ಇಲಾಖೆಯ ಹೊಸ ಸೂಚನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಸಚಿವರ ಸಭೆ ನಡೆಸಲು ನಿರ್ಧರಿಸಿದ್ದಾರೆ. ಸದ್ಯಕ್ಕೆ ಜೂನ್ 7ರವರೆಗೆ ರಾಜ್ಯದಲ್ಲಿ ಕಟ್ಟುನಿಟ್ಟಾದ ಲಾಕ್ ಡೌನ್ ಜಾರಿಯಲ್ಲಿ ಇರಲಿದೆ. ಇದರಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಆದರೆ ಕೇಂದ್ರ ಗೃಹ ಇಲಾಖೆ ಹೊರಡಿಸಿರುವ ಸುತ್ತೋಲೆಯಲ್ಲಿ ಜೂನ್ 30ರವರೆಗೆ ಬಿಗಿ ಕ್ರಮಗಳು ಇರಬೇಕು ಅಂತ ಹೇಳಿದೆ ಎಂದರು.
ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಇನ್ನೂ ಕಡಿಮೆಯಾಗಿಲ್ಲ. ಅದು ಶೇಕಡ 10ಕ್ಕಿಂತ ಕಡಿಮೆ ಆಗಬೇಕಾಗಿದೆ. ಗ್ರಾಮೀಣ ಪ್ರದೇಶದಲ್ಲಿಯೂ ಕೋವಿಡ್ ಪ್ರಮಾಣ ಮತ್ತು ಸಾವುಗಳ ಸಂಖ್ಯೆ ನಿಯಂತ್ರಣಕ್ಕೆ ಬರಬೇಕು. ಆಗ ಮಾತ್ರ ಕೋವಿಡ್ ಹತೋಟಿಗೆ ಬರಲು ಸಾಧ್ಯ. ಆಗ ನಮ್ಮ ರಾಜ್ಯದಲ್ಲಿರುವ ಆಸ್ಪತ್ರೆಗಳಲ್ಲಿನ ಮೂಲಭೂತ ಸೌಕರ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು.
ರಾಜ್ಯದ ಜಿಎಸ್ ಟಿ ಪಾಲನ್ನ ನೀಡುವಂತೆ ಕೇಂದ್ರಕ್ಕೆ ಒತ್ತಡ ಹಾಕಿದ್ದೇವೆ. ನಿನ್ನೆ ನಡೆದ ಜಿಎಸ್ ಟಿ ಕೌನ್ಸಿಲ್ ಸಭೆಯಲ್ಲಿ ಒತ್ತಾಯಿಸಿದ್ದೇವೆ. ನಮ್ಮ ಪಾಲಿನ 11 ಸಾವಿರ ಕೋಟಿ ರೂ. ಕೊಡುವಂತೆ ಕೇಂದ್ರದ ಮೇಲೆ ಒತ್ತಡ ಹೇರಲಾಗಿದೆ. ಹಾಗೆಯೇ ಲಾಕ್ ಡೌನ್ ನಿಂದಾದ ನಷ್ಟಕ್ಕೆ ಪರಿಹಾರ ನೀಡುವಂತೆ ಮನವಿ ಸಲ್ಲಿಸಿದ್ದೇವೆ. ಕೇಂಧ್ರದಿಂದ ಪರಿಹಾರದ ನಿರೀಕ್ಷೆಯಲ್ಲಿದ್ದೇವೆ ಎಂದರು.