ಬೆಂಗಳೂರು : ಕೋವಿಡ್ ನಿಯಂತ್ರಣಕ್ಕೆ ಬಾರದ 11 ಜಿಲ್ಲೆಯಲ್ಲಿ ಪ್ರಸ್ತುತ ಜಾರಿಯಲ್ಲಿರುವ ಲಾಕ್ಡೌನ್ ಅನ್ನು ಜೂನ್ 21ರವರೆಗೆ ಮುಂದುವರೆಸಲಾಗುವುದು. ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆ ಹೊರತು ಪಡಿಸಿ ನಿರ್ಬಂಧ ಸಡಿಲಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಂಕಿನ ದರ ಹೆಚ್ಚಿರುವ ಜಿಲ್ಲೆಗಳಲ್ಲಿ ಲಾಕ್ಡೌನ್ ಮುಂದುವರೆಯಲಿದ್ದು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಹಾಸನ, ಮಂಡ್ಯ, ಬೆಳಗಾವಿ, ಕೊಡಗು, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಲಾಕ್ ಡೌನ್ ಯಥಾಸ್ಥಿತಿ ಇರಲಿದೆ. ಬಹುತೇಕ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಯಮ ಜೂನ್ 14ರ ಬಳಿಕ ಸಡಿಲಿಕೆಗೊಳಿಸಲಾಗುವುದು ಎಂದು ಸಿಎಂ ಘೋಷಣೆ ಮಾಡಿದ್ದಾರೆ.
ಸಭೆಯ ಪ್ರಮುಖ ನಿರ್ಧಾರಗಳು
ಮಧ್ಯಾಹ್ನ 2 ಗಂಟೆಯವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ
ಎಲ್ಲಾ ಕಾರ್ಖಾನೆಗಳಲ್ಲಿ ಶೇ. 50ರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸಲು ಅನುಮತಿ
ಗಾರ್ಮೆಂಟ್ಸ್ಗಳಲ್ಲಿ ಶೇ. 30ರಷ್ಟು ಸಿಬ್ಬಂದಿಗೆ ಮಾತ್ರ ಅವಕಾಶ
ಸರ್ಕಾರಿ ಕಚೇರಿಗಳಲ್ಲಿ ಶೇ. 50ರಷ್ಟು ಮಂದಿಯ ಹಾಜರಾತಿಗೆ ಅವಕಾಶ
ನಿರ್ಮಾಣ ಚಟುವಟಿಕೆ ಪ್ರಾರಂಭಿಸಲು ಸರ್ಕಾರ ಅನುಮತಿ
ಸಿಮೆಂಟ್ ಮತ್ತು ಸ್ಟೀಲ್ ಅಂಗಡಿ ತೆರೆಯಲು ಅನುಮತಿ
ಬೆಳಗ್ಗೆ 5 ರಿಂದ 10ರವರೆಗೆ ಪಾರ್ಕ್ಗಳು ಓಪನ್ ಇರುತ್ತವೆ
ಬೀದಿ ಬದಿ ವ್ಯಾಪಾರಿಗಳಿಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ
ಆಟೋ, ಟ್ಯಾಕ್ಸಿಗಳಲ್ಲಿ ಇಬ್ಬರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ
ವೀಕೆಂಡ್ ಕರ್ಫ್ಯೂ ಶುಕ್ರವಾರ ಸಂಜೆ 7 ರಿಂದ ಸೋಮವಾರ ಬೆಳಗ್ಗೆ 5ರವರೆಗೆ ಜಾರಿ