ಬೆಂಗಳೂರು : ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ಪರೀಕ್ಷೆ ರದ್ದತಿಯ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಕೊರೊನಾ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಎಸ್.ಎಸ್.ಎಲ್.ಸಿ-ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದು ಪಡಿಸುವ ಬಗ್ಗೆ ಸದ್ಯಕ್ಕೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದಿದ್ದಾರೆ.
ಕೆಲವು ಮಾಧ್ಯಮಗಳ ಸುದ್ದಿ ಊಹಾಪೋಹವಷ್ಟೇ ಎಂದಿರುವ ಸಚಿವರು ವಿದ್ಯಾರ್ಥಿಗಳ ಭವಿಷ್ಯ ಹಾಗೂ ಯೋಗಕ್ಷೇಮವನ್ನು ಗಮನದಲ್ಲಿರಿಸಿ ಮುಂದಿನ ದಿನಗಳಲ್ಲಿ ಅವರ ಒಳಿತಿಗೆ ಪೂರಕವಾದ ನಿರ್ಣಯ ತೆಗೆದುಕೊಳ್ಳಲಾಗುವುದು. ಯಾವುದೇ ಕಾರಣಕ್ಕೂ ವಿಚಲಿತರಾಗದೇ ವಿದ್ಯಾರ್ಥಿಗಳು ಓದಿನಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.