ಅತ್ಯಾಧುನಿಕ ಮಾಡ್ಯುಲರ್ ಐಸಿಯು ಲೋಕಾರ್ಪಣೆ

ಬೆಂಗಳೂರು: ಅತ್ಯಾಧುನಿಕ ಮಾಡ್ಯೂಲರ್ ಐಸಿಯು ಘಟಕವನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಲೋಕಾರ್ಪಣೆ ಮಾಡಿದರು. ಮಲ್ಲೇಶ್ವರಂನಲ್ಲಿರುವ ಕೆ ಸಿ ಜನರಲ್ ಆಸ್ಪತ್ರೆಯಲ್ಲಿ ಈ ಐಸಿಯು ವನ್ನು ಸ್ಥಾಪಿಸಲಾಗಿದೆ. ಅತ್ಯಂತ ಕಡಿಮೆ ಅವಧಿಯಲ್ಲಿ ಮಾಡ್ಯೂಲರ್ ಐಸಿಯು ಸ್ಥಾಪಿಸಿರುವುದು ಶ್ಲಾಘನೀಯ. ಇದರಿಂದ ಈ ಭಾಗದ ಜನರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿದ ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ, ಕೋವಿಡ್ ಸೋಂಕಿತರಿಗೆ ಚಿಕಿತ್ಸೆ ನೀಡಲು ಮಾಡ್ಯೂಲರ್ ಐಸಿಯುಗಳ ಅತ್ಯಂತ ಸಹಕಾರಿ. 100 ಹಾಸಿಗೆಗಳು ಇಲ್ಲಿ ಲಭ್ಯವಿದ್ದು, ದಾನಿಗಳ ನೆರವಿನಿಂದ ನಿರ್ಮಾಣ ಮಾಡಲಾಗಿದೆ. ಎಂಥಹುದೇ ಪರಿಸ್ಥಿತಿಯಲ್ಲೂ ಇವುಗಳನ್ನು ಬಳಸಬಹುದಾಗಿದೆ. ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿನ ಟ್ರಾಮಾ ಕೇರ್ ಸೆಂಟರನ್ನೇ ಅಕಾಡೆಮಿಕ್ ಕ್ರಿಟಿಕಲ್ ಕೇರ್ ಸೆಂಟರ್ ಆಗಿ ಮಾಡುವುದರಿಂದ ತಜ್ಞ ಸಿಬ್ಬಂದಿಯ ಕೊರತೆ ನೀಗಿಸಬಹುದು ಎಂದು ಹೇಳಿದರು. ಅಲ್ಲದೇ, ಜಯದೇವ ಹೃದ್ರೋಗ ಆಸ್ಪತ್ರೆ ವತಿಯಿಂದ 50 ಹಾಸಿಗೆಯ ಕ್ಯಾಥ್ ಲ್ಯಾಬ್ ಸ್ಥಾಪನೆ ಹಾಗೂ 50 ಹಾಸಿಗೆಯ ಟ್ರಾಮಾ ಕೇರ್ ಸೆಂಟರ್ ಹಾಗೂ 150 ಹಾಸಿಗೆಯ ತಾಯಿ- ಮಗು ಚಿಕಿತ್ಸಾ ಕೇಂದ್ರವನ್ನು ಕೆ.ಸಿ.ಜನರಲ್ ಆಸ್ಪತ್ರೆ ಆವರಣದಲ್ಲಿ ಸ್ಥಾಪಿಸಲಾಗುವುದು ಎಂದರು.