ನೆರೆಯ ಕೇರಳದಲ್ಲಿ ಆತಂಕ ಸೃಷ್ಟಿಸಿರುವ ನಿಫಾ ವೈರಸ್ ರಾಜ್ಯಕ್ಕೆ ಕಾಲಿಡದಂತೆ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನಲ್ಲಿ ತಮ್ಮ ನಿವಾಸದ ಬಳಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ಕೊರೊನಾ ವೈರಸ್ ಹೆಚ್ಚಳ ಮತ್ತು ನಿಫಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಗಡಿಭಾಗವನ್ನು ಸೀಲ್ ಡೌನ್ ಮಾಡಿ ಲಸಿಕೆ ನೀಡಿಕೆ ಮತ್ತು ಕೊರೋನಾ ಪರೀಕ್ಷೆಯನ್ನು ಹೆಚ್ಚಳ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಬಿಗಿ ಕ್ರಮ ಕೈಗೊಳ್ಳುತ್ತೇವೆ ಎಂದರು.
ನಿಫಾ ವೈರಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನಮ್ಮ ತಜ್ಞರ ಬಳಿ ತಿಳಿದುಕೊಳ್ಳಲು ಹೇಳಿದ್ದು ಯಾವ ರೀತಿ ಹರಡುತ್ತದೆ, ಮುಂಜಾಗ್ರತೆ ಕ್ರಮ ಕೈಗೊಳ್ಳಲು ಸಲಹೆ ನೀಡುವಂತೆ ಮತ್ತು ವರದಿ ನೀಡುವಂತೆ ಸೂಚಿಸಿದ್ದೇನೆ. ನಿಫಾ ವೈರಸ್ನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು ನಿಯಂತ್ರಿಸುವ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.