ನವದೆಹಲಿ: ಹೆಚ್ಚುತ್ತಿರುವ ಕೊರೋನಾ ಸೋಂಕು ಪ್ರಕರಣಗಳಿಂದ ಭಾರತ ತತ್ತರಿಸಿದೆ. ದೇಶದ ಹಲವೆಡೆ ಕೋವಿಡ್ ಸೋಂಕು ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿದ್ದು ಆತಂಕ ಸೃಷ್ಟಿಸಿವೆ.
ರಾಷ್ಟ್ರರಾಜಧಾನಿ ನವದೆಹಲಿಯಲ್ಲಿಯೂ ಕೊರೋನಾ ಪ್ರಕರಣಗಳು ಹೆಚ್ಚುತ್ತಿದ್ದು, ಸರ್ಕಾರ ಏ.30ರವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಿ ಆದೇಶಿಸಿದೆ. ಕೊರೋನಾ ನಿಯಂತ್ರಣಕ್ಕೆ ರಾತ್ರಿ 10ಗಂಟೆಯಿಂದ ಬೆಳಗ್ಗೆ 5ರವರೆಗೆ ಇಂದಿನಿಂದ ಜಾರಿಯಾಗುವಂತೆ ನೈಟ್ ಕರ್ಫ್ಯೂ ಜಾರಿಯಾಗಲಿದೆ ಎಂದು ದೆಹಲಿ ಸರ್ಕಾರದ ಮೂಲಗಳು ಮಾಹಿತಿ ನೀಡಿವೆ.
ನವದೆಹಲಿಯಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ. ಆದರೆ ಸೋಂಕು ತಡೆಗೆ ಲಾಕ್ಡೌನ್ ಹೇರುವುದಿಲ್ಲ. ಬದಲಿಗೆ ರಾತ್ರಿ ಕರ್ಫ್ಯೂ ಹೇರುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮಾಹಿತಿ ನೀಡಿದ್ದರು.
ನಿನ್ನೆ ದೆಹಲಿಯಲ್ಲಿ 3548 ಕೋವಿಡ್-19 ಸೋಂಕು ಪ್ರಕರಣಗಳು ದೃಢವಾಗಿವೆ. ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಬೇಕೆಂದು ಸರ್ಕಾರ ಕಟ್ಟುನಿಟ್ಟಿನ ಆದೇಶ ನೀಡಿದೆ.