ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ. ರಾಜೀನಾಮೆ ನೀಡುವಂತೆ ಯಾರೂ ನನಗೆ ಸೂಚಿಸಿಲ್ಲ. ಆ ಬಗ್ಗೆ ಪ್ರಸ್ತಾಪವೂ ಆಗಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.
ಶನಿವಾರ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿದ ನಂತರ ಹಸನ್ಮುಖರಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುವ ಹೊಣೆ ನನ್ನ ಮೇಲಿದೆ. ನನ್ನ ಶ್ರಮದ ಬಗ್ಗೆ ವರಿಷ್ಠರು ಮೆಚ್ಚುಗೆ ಸೂಚಿಸಿದ್ದಾರೆ ಎಂದರು.
ಮುಂದೆ ತಿಂಗಳಿಗೊಮ್ಮೆ ದೆಹಲಿಗೆ ಬಂದು ಹೈಕಮಾಂಡ್ ಜೊತೆ ಚರ್ಚಿಸುತ್ತೇನೆ. ವರಿಷ್ಠರ ಸೂಚನೆಯಂತೆ ಪಕ್ಷ ಸಂಘಟನೆ ಹಾಗೂ ಅಭಿವೃದ್ಧಿ ಕಡೆ ಗಮನ ಹರಿಸುವೆ ಎಂದು ಅವರು ಸ್ಪಷ್ಟಪಡಿಸಿದರು.