ರಾಜ್ಯದಲ್ಲಿ ಆನ್ ಲೈನ್ ಜೂಜಾಟವನ್ನು ನಿಷೇಧಿಸಿ ರಾಜ್ಯ ಸಚಿವ ಸಂಪುಟದಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.
ಬೆಂಗಳೂರಿನಲ್ಲಿ ಶನಿವಾರ ನಡೆದ ಸಚಿವ ಸಂಪುಟ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಸಚಿವ ಮಾಧುಸ್ವಾಮಿ ಈ ವಿಷಯ ತಿಳಿಸಿದ್ದು, ರಾಜ್ಯದಲ್ಲಿ ಆನ್ ಲೈನ್ ಗ್ಯಾಂಬ್ಲಿಂಗ್ ಗೇಮ್ ನಿಷೇಧಿಸಲು ತೀರ್ಮಾನಿಸಲಾಗಿದ್ದು, ಈ ಕುರಿತು ಸರ್ಕಾರ ಸದನದಲ್ಲಿ ತಿದ್ದುಪಡಿ ಕಾಯಿದೆ ಮಂಡಿಸಲಿದೆ ಎಂದರು.
ಸಾರ್ವಜನಿಕವಾಗಿ ಗಣೇಶೋತ್ಸವ ಆಚರಣೆ ಕುರಿತ ನಿರ್ಧಾರವನ್ನು ಸಂಪುಟ ಸಹುದ್ಯೋಗಿ ಸಚಿವರು ಸಿಎಂ ವಿವೇಚನೆಗೆ ಬಿಟ್ಟಿದ್ದಾರೆ. ಈ ಬಗ್ಗೆ ಸಿಎಂ ಅವರೇ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ನಾಳೆ ಈ ಸಂಬಂಧ ತಜ್ಞರ ಜತೆ ಸಭೆ ನಡೆಸಿದ ಬಳಿಕ ಅಂತಿಮ ತೀರ್ಮಾನ ತಿಳಿಸಲಾಗುವುದು ಎಂದು ತಿಳಿಸಿದರು.
ಇದೇ ವೇಳೆ, ಮೈಸೂರು ಅರಮನೆಗೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಲೋಕಾಯುಕ್ತ ಪ್ರಕರಣಗಳ ಕುರಿತಂತೆ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದ್ದು, ಈ ಪ್ರಕರಣ ಕೈಬಿಡಲು ಸಂಪುಟದಲ್ಲಿ ನಿರ್ಧರಿಸಲಾಗಿದೆ ಎಂದರು. ಹೇಮಾವತಿ ನಾಲೆಯಿಂದ ಚಿಕ್ಕನಾಯಕನಹಳ್ಳಿ ತಾಲೂಕಿನ 26 ಕೆರೆಗಳಿಗೆ ನೀರು ಹರಿಸುವ ಕಾಮಗಾರಿಗೆ 98.50 ಕೋಟಿ ಬಿಡುಗಡೆಗೆ ನಿರ್ಧಾರ ಕೈಗೊಳ್ಳಳಾಗಿದೆ ಎಂದರು.