ಬೆಂಗಳೂರು : ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಕಡೆಗಳಲ್ಲಿ ತಲಾ 25 ರಂತೆ ಆಕ್ಸಿಜನ್ ಕಾನ್ಸಂಟ್ರೇಟರ್ ಕಳುಹಿಸಿಕೊಡಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಡ್ಯ, ಚಿತ್ರದುರ್ಗ, ಕೋಲಾರ, ಹಾಸನ, ಚಿಕ್ಕಬಳ್ಳಾಪುರ ಮೊದಲಾದ ಮೂಲಸೌಕರ್ಯ ಕಡಿಮೆ ಇರುವ ಕಡೆಗಳಿಗೆ ನೀಡಲಾಗುತ್ತಿದೆ. ರಾಜ್ಯದ ಮೆಡಿಕಲ್ ಕಾಲೇಜುಗಳಲ್ಲಿ ಕೋವಿಡ್ ಚಿಕಿತ್ಸೆಗೆ ಐಸಿಯು ವ್ಯವಸ್ಥೆ, ಆಕ್ಸಿಜನ್ ಪೂರೈಕೆ ಸೇರಿದಂತೆ ಹೆಚ್ಚು ನೆರವು ನೀಡಲು ಚರ್ಚಿಸಲಾಗುವುದು. ಇದಕ್ಕಾಗಿ ತುಮಕೂರು, ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡಲಾಗುತ್ತಿದೆ. ನಂತರ ದಾವಣಗೆರೆ, ಹಾವೇರಿ, ಹುಬ್ಬಳ್ಳಿ, ಗದಗ ಜಿಲ್ಲೆಗಳಿಗೆ ಭೇಟಿ ನೀಡಿ ಚರ್ಚಿಸಲಾಗುವುದು ಎಂದರು.
ಪ್ರತಿ ಗ್ರಾಮ ಪಂಚಾಯಿತಿಗೆ 50 ಸಾವಿರ ರೂ. ಮುಂಗಡ ನೀಡಲು ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ. ಹಳ್ಳಿಗಳ ಕೋವಿಡ್ ಟಾಸ್ಕ್ ಫೋರ್ಸ್ ಸಮಿತಿಗೆ ಇದು ಅನುಕೂಲವಾಗಲಿದೆ. ಸೋಂಕಿತರ ಮನೆಗೆ ಭೇಟಿ ನೀಡಿ, ಅವರನ್ನು ಕೋವಿಡ್ ಕೇರ್ ಕೇಂದ್ರಕ್ಕೆ ಸಾಗಿಸಲು ಸಹಕಾರಿಯಾಗಲಿದೆ ಎಂದರು.