ರಾಜ್ಯದಲ್ಲಿ ಕೊರೊನಾ ಎರಡನೆ ಅಲೆಗೆ ಕಡಿವಾಣ ಹಾಕಲು ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ಒಂದು ವೇಳೆ ನಿಯಂತ್ರಣಕ್ಕೆ ಬಾರದೇ ಇದ್ದರೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ನಿಯಂತ್ರಣಕ್ಕೆ ಜನರು ಸಹಕರಿಸಬೇಕು. ಇಲ್ಲದಿದ್ದರೆ ಮತ್ತಷ್ಟು ಕಠಿಣ ಕ್ರಮ ಅನಿವಾರ್ಯ. ತಜ್ಞರ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಅವರು ಸೂಚಿಸಿದ ಸಲಹೆ ಜಾರಿಗೆ ತರಲಾಗುವುದು. ಈ ಬಗ್ಗೆ ಸಚಿವರ ಜೊತೆ ಮುಖ್ಯಮಂತ್ರಿಗಳು ಚರ್ಚಿಸಿ ತೀರ್ಮಾನಿಸಲಿದ್ದಾರೆ ಎಂದರು.
ಸರಕಾರ ಹಣ ಕೊಡುತ್ತೆ ಅಂತ ಕೊರೊನಾ ಸೋಂಕು ಇಲ್ಲದೇ ಇದ್ದರೂ ಅನಗತ್ಯವಾಗಿ ಆಸ್ಪತ್ರೆಗೆ ದಾಖಲು ಮಾಡಿಕೊಂಡರೆ ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಸಿದರು.
ಕೊರೊನಾ ವೈರಸ್ ವೈದ್ಯ ಲೋಕಕ್ಕೆ ದೊಡ್ಡ ಸವಾಲಾಗಿದೆ. ಮೊದಲ ಬಾರಿ ಕೊರೊನಾ ಕಾಣಿಸಿಕೊಂಡಾಗ ಇಷ್ಟು ಪ್ರಮಾಣದಲ್ಲಿ ಆಕ್ಸಿಜನ್ ಅಗತ್ಯ ಬೀಳಲಿಲ್ಲ. ಆದರೆ ಈ ಬಾರಿ ಆಕ್ಸಿಜನ್ ಬೇಡಿಕೆ ಹೆಚ್ಚಾಗಿದೆ ಎಂದರು.
ಕೊರೊನಾ ಸೋಂಕು ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ 2000 ಐಸಿಯು ಬೆಡ್ ಗಳ ವ್ಯವಸ್ಥೆ ಮಾಡಲಾಗುವುದು. ಅಲ್ಲದೇ ಜಿಲ್ಲಾ ಮಟ್ಟದಲ್ಲಿ ಮ್ಯೂಡಲ್ ಆಸ್ಪತ್ರೆಗಳನ್ನು ನಿರ್ಮಿಸಲಾಗುವುದು. ಇವು 15 ದಿನದಲ್ಲಿ ಕಾರ್ಯಾರಂಭ ಮಾಡಲಿವೆ ಎಂದು ಸುಧಾಕರ್ ಸ್ಪಷ್ಟಪಡಿಸಿದರು.
ಕೊರೊನಾ ಎರಡನೇ ಅಲೆಯನ್ನು ತಡೆಯಲು ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ. ಜನರು ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಹಕರಿಸುವಂತೆ ಮನವಿ ಮಾಡಿದರು.