ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಚಿವ ಸಂಪುಟದಲ್ಲಿ, ಕಲ್ಯಾಣ ಕರ್ನಾಟಕ ಭಾಗದ ಶಾಸಕರನ್ನು ಕಡೆಗಣಿಸಿದ್ದಕ್ಕೆ ರಾಯಚೂರು ಜಿಲ್ಲಾ ಕನ್ನಡಪರ ಸಂಘಟನೆಗಳು ಸಚಿವ ಸಂಪುಟಕ್ಕೆ ಧಿಕ್ಕಾರ ಕೂಗಿ ಪ್ರತಿಭಟನೆ ನಡಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಮುಂದುಗಡೆ ಬಿಜೆಪಿ ಸರ್ಕಾರ, ನೂತನ ಸಚಿವ ಸಂಪುಟಕ್ಕೆ ಹಾಗೂ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧಿಕ್ಕಾರ ಕೂಗುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ಕಳೆದ ದಶಕಗಳಿಂದ ಕಲ್ಯಾಣ ಕರ್ನಾಟಕ ಭಾಗದ ಶಾಸಕರಿಗೆ, ಸಂಪುಟದಲ್ಲಿ ಹೆಚ್ಚಿನ ಸ್ಥಾನಗಳು ದೊರೆಯುತ್ತಿಲ್ಲ, ಈ ಭಾಗದ ಶಾಸಕರನ್ನು ಕಡೆಗಣಿಸುತ್ತಿದ್ದೀರಿ. ಇದರಿಂದ ಪ್ರತ್ಯೇಕ ರಾಜ್ಯ ಹೋರಾಟಕ್ಕೆ ಹೊಣೆಯಾಗಬೇಕಾಗುತ್ತದೆ ಎಂದು ಆರೋಪಿಸಿದರು.
ರಾಯಚೂರು ಜಿಲ್ಲೆಗೆ ಕಳೆದ ಯಡಿಯೂರಪ್ಪನವರ ಸರ್ಕಾರದಲ್ಲಿಯೂ ಸಚಿವ ಸ್ಥಾನ ನೀಡಲಿಲ್ಲ, ಈ ಬಾರಿಯೂ ಕೂಡ ಸಚಿವ ಸ್ಥಾನವನ್ನು ನೀಡದೆ ರಾಯಚೂರು ಜಿಲ್ಲೆಯ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಬೇಡಿ. ಅನ್ಯ ಜಿಲ್ಲೆಯ ಸಚಿವರನ್ನು ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ಮಾಡಿದರೆ ಜಿಲ್ಲೆಯ ಅಭಿವೃದ್ಧಿ ಕುಂಠಿತಗೊಳ್ಳುತ್ತದೆ ಹಾಗೂ ಅವರು ಕೇವಲ ನಾಮಮಾತ್ರಕ್ಕೆ ಉಸ್ತುವಾರಿಗಳಾಗಿ ಕೆಲಸ ಮಾಡುತ್ತಾರೆ, ಆದ್ದರಿಂದ ಜಿಲ್ಲೆಗೆ ಸಚಿವ ಸ್ಥಾನ ನೀಡಬೇಕೆಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.