ಗದಗ : ಮೂಲಭೂತ ಸೌಕರ್ಯ ಒದಗಿಸುವಂತೆ ಗದಗ ಬೆಟಗೇರಿಯ ವೀರನಾರಾಯಣ ಬಡಾವಣೆ ಹಾಗೂ ಕೆ.ಎಚ್.ಪಾಟೀಲ (ಹಮಾಲರ ಪ್ಲಾಟ) ಬಡಾವಣೆ ನಿವಾಸಿಗಳು ಎತ್ತಿನ ಬಂಡಿ ಸಮೇತ ಪ್ರತಿಭಟನೆ ನಡೆಸಿದರು. ನೂರಾರು ಪ್ರತಿಭಟನಾಕಾರರು ಎತ್ತಿನ ಬಂಡಿಗಳ ಸಮೇತ ನಗರಸಭೆಗೆ ಮುತ್ತಿಗೆ ಹಾಕಿ ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.
ನಂತರ ಜಿಲ್ಲಾಧಿಕಾರಿಗಳ ಕಚೇರಿವರೆಗೂ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳಿಗೂ ಮನವಿ ಸಲ್ಲಿಸಿದ್ರು. ದಿನದ 24 ಗಂಟೆಯೂ ಕುಡಿಯುವ ನೀರಿನ ಯೋಜನೆ ಹಾಗೂ ಯುಜಿಡಿ ಕಾಮಗಾರಿಯಿಂದ ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ. ಇದರಿಂದ ಮಕ್ಕಳು ಚರಂಡಿಯಲ್ಲಿ ಬಿದ್ದು ಗಾಯ ಮಾಡಿಕೊಂಡಿವೆ.
ಬೀದಿ ದೀಪ, ಆಟದ ಮೈದಾನ, ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ, ಸಾಮೂಹಿಕ ಶೌಚಾಲಯ ಸೇರಿದಂತೆ ಬಡಾವಣೆಗೆ ಸಿಗಬೇಕಾದ ಮೂಲಭೂತ ಸೌಕರ್ಯಗಳು ಸಮರ್ಪಕವಾಗಿ ಸಿಗುತ್ತಿಲ್ಲ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೂ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಅಂತ ಬಡಾವಣೆ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದರು.
ತಕ್ಷಣ ಸಮಸ್ಯೆಗಳನ್ನು ಬಗೆಹರಿಸದಿದ್ದಲ್ಲಿ ಮುಂಬರುವ ಚುನಾವಣೆಯನ್ನ ಬಹಿಷ್ಕರಿಸುವ ಮೂಲಕ ತಕ್ಕ ಪಾಠ ಕಲಿಸಲಾಗುವದು ಜೊತೆಗೆ ಉಗ್ರ ಪ್ರತಿಭಟನೆ ಹಮ್ಮಿಕೊಳ್ಳಲಾಗುವದು ಅಂತ ಬಡಾವಣೆ ನಿವಾಸಿಗಳು ಆಕ್ರೋಶ ಹೊರಹಾಕಿದರು.