ಬೆಂಗಳೂರು: ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪರೀಕ್ಷೆಗೆ ನೊಂದಾಯಿಸಿದ ಎಲ್ಲ ವಿದ್ಯಾರ್ಥಿಗಳನ್ನು ಪಿ.ಯು.ಸಿ ತರಗತಿಗಳ ಪ್ರವೇಶಕ್ಕೆ ಅವಕಾಶ ನೀಡಲು ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಈ ವರ್ಷದ ಎಸ್ ಎಸ್ ಎಲ್ ಸಿ ಪರೀಕ್ಷೆಗಳ ಕುರಿತು ರಾಜ್ಯದ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಲು ಶುಕ್ರವಾರ ಡಿ.ಎಸ್.ಇ.ಆರ್.ಟಿ ಯಲ್ಲಿ “ಬನ್ನಿ ವಿದ್ಯಾರ್ಥಿಗಳೇ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಆತ್ಮಸ್ಥೈರ್ಯದಿಂದ ಬರೆಯೋಣ” ಎಂಬ ಧ್ಯೇಯದೊಂದಿಗೆ ರಾಜ್ಯದ ಎಸ್ಸೆಸ್ಸೆಲ್ಸಿ ಪರೀಕ್ಷಾರ್ಥಿಗಳೊಂದಿಗೆ ವಿಡಿಯೋಕಾನ್ಫೆರೆನ್ಸ್ ಮೂಲಕ ನಡೆದ ಮುಕ್ತ ಸಂವಾದದಲ್ಲಿ ವಿದ್ಯಾರಥಿಗಳ ಪ್ರಶ್ನೆ/ ಸಲಹೆಗಳಿಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ಎಲ್ಲರೂ ಪಾಸಾಗುವುದರಿಂದ ಪಿಯು ಪ್ರವೇಶ ಸಮಸ್ಯೆಯ ಕುರಿತು ಯಾರಿಗೂ ಯಾವುದೇ ಆತಂಕ ಬೇಡವೇ ಬೇಡ ಎಂದರು.
“ಈಗಾಗಲೇ ವಿದ್ಯಾರ್ಥಿಗಳಾದ ನೀವು ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಎಲ್ಲ ರೀತಿಯ ಸಿದ್ಧವಾಗಿರುವುದರಿಂದ ಧೈರ್ಯದಿಂದ ಪರೀಕ್ಷೆ ಬರೆಯುವುದರತ್ತ ಗಮನ ಹರಿಸಿ ನಾವು ನಿಮ್ಮನ್ನು ಪಿಯುಸಿ ತರಗತಿಗಳಿಗೆ ಪ್ರವೇಶ ನೀಡಲು ಎಲ್ಲ ವ್ಯವಸ್ಥೆ ಮಾಡುತ್ತೇವೆ” ಎಂದರು.
ರಾಜ್ಯದ ಸರ್ಕಾರಿ ಪಿಯು ಕಾಲೇಜಗಳಲ್ಲಿ ಪಿಯು ಸೀಟುಗಳನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು. ಹಾಗೆಯೇ ಖಾಸಗಿ ಶಾಲೆಗಳಿಂದ ಪಿಯು ಸೀಟುಗಳ ಹೆಚ್ಚಳದ ಕೋರಿಕೆಗಳು ಬಂದರೆ ಪರಿಗಣಿಸಿ ಎಲ್ಲ ವಿದ್ಯಾರ್ಥಿಗಳಿಗೂ ಪಿಯುಸಿ ಸೀಟು ದೊರೆಯುವಂತೆ ವ್ಯವಸ್ಥೆ ಮಾಡಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.