ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ವರುಣನ ಆರ್ಭಟ ಶುರುವಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಶುಕ್ರವಾರ ಸಂಜೆ ಮಳೆಯಾಗಿದ್ದು, ಶನಿವಾರ ಸಂಜೆ ಕೂಡ ಮಳೆಯ ಆರ್ಭಟ ಶುರುವಾಗಿದೆ. ಇದರಿಂದ ವಿಕೇಂಡ್ ಮೂಡಿನಲ್ಲಿದ್ದ ಜನರಿಗೆ ಕಿರಿಕಿರಿಯಾಗಿದೆ. ಅಲ್ಲದೇ ಸಂಜೆ ಹೊತ್ತಿನಲ್ಲಿ ಜೋರು ಮಳೆ ಸುರಿದ ಹಿನ್ನಲೆ ಹಲವು ಕಡೆ ದ್ವಿಚಕ್ರ ವಾಹನ ಸವಾರರು ತೊಂದರೆ ಅನುಭವಿಸಿದ್ದು, ಹಲವೆಡೆ ಟ್ರಾಫಿಕ್ ಜಾಮ್ ಉಂಟಾಗಿದೆ.
ನಗರದ ವಸಂತನಗರ, ಕೆ ಆರ್ಪುರಂ, ಮೆಜೆಸ್ಟಿಕ್, ಕಾರ್ಪೋರೇಷನ್, ಚಾಮರಾಜಪೇಟೆ, ಕೋರಮಂಗಲ, ಶಾಂತಿನಗರ, ಮಲ್ಲೇಶ್ವರಂ, ಆನಂದ್ ರಾವ್ ಸರ್ಕಲ್, ನೃಪತುಂಗ ರಸ್ತೆ ಸೇರಿದಂತೆ ಬಹುತೇಕ ಕಡೆ ಮಳೆ ಅಬ್ಬರಿಸಿದೆ. ವಾಯುಭಾರ ಕುಸಿತದಿಂದಾಗಿ ಮಳೆಯಾಗುತ್ತಿದ್ದು, ಇನ್ನು ಎರಡು ದಿನ ಮೋಡ, ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ ಎಂದು ಈಗಾಗಲೇ ಹವಾಮಾನ ಇಲಾಖೆ ಸೂಚನೆ ನೀಡಿದೆ.
ಕೇವಲ ಬೆಂಗಳೂರು ಮಾತ್ರವಲ್ಲದೇ, ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾಗಲಿದೆ. ಅಲ್ಲಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾಧರಣ ಮಳೆ ಮತ್ತ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.