ಬೆಂಗಳೂರು: ರಾಜ್ಯಾದ್ಯಂತ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದಲ್ಲಿ ಎರಡು ದಿನ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಹಿನ್ನಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಜಿಲ್ಲೆಗಳಲ್ಲಿ ಏಪ್ರಿಲ್ 14, 15 ರಂದು ಗುಡುಗು-ಮಿಂಚು ಸಹಿತ ಭಾರೀ ಮಳೆಯಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಉತ್ತರ ಕರ್ನಾಟಕದ ಜಿಲ್ಲೆಗಳಾದ ಬಾಗಲಕೋಟೆ, ವಿಜಯಪುರ, ಬೆಳಗಾವಿ, ಧಾರವಾಡ ಸೇರಿದಂತೆ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ಮೈಸೂರಿನಲ್ಲಿಯೂ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.