ಕೇರಳ ಮತ್ತು ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಲ್ಲಿ ಕೇರಳ ರಾಜ್ಯದಿಂದ ಆಗಮಿಸುವವರಿಗೆ ಆರ್ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರುವುದನ್ನು ಕಡ್ಡಾಯ ಮಾಡಲಾಗಿದೆ.
ಈ ನಿಟ್ಟಿನಲ್ಲಿ ತಪಾಸಣೆಗಾಗಿ ದಕ್ಷಿಣ ಕನ್ನಡ ಮತ್ತು ಕೇರಳ ಗಡಿ ಸಂಪರ್ಕಿಸುವ ತಲಪಾಡಿ, ಜಾಲ್ಸೂರು, ನೆಟ್ಟನಿಗೆ ಮುಡ್ನೂರು ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದೆ. ಆರ್ಟಿ-ಪಿಸಿಆರ್ ನೆಗೆಟಿವ್ ವರದಿ ಹೊಂದಿದ್ರೆ ಮಾತ್ರವೇ ಮಂಗಳೂರಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ.
ಮಂಗಳೂರಿನ ತಲಪಾಡಿಯಲ್ಲಿ ಮಂಗಳವಾರ ಬೆಳಗ್ಗೆ 10 ಗಂಟೆಯ ನಂತರ ತಪಾಸಣೆ ಆರಂಭಿಸಲಾಗಿದೆ. ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇದ್ದವರಿಗೆ ಮಾತ್ರ ಮಂಗಳೂರು ಪ್ರವೇಶಕ್ಕೆ ಅನುಮತಿ ನೀಡಲಾಗುತ್ತಿದೆ. ಆರ್ಟಿಪಿಸಿಆರ್ ನೆಗೆಟಿವ್ ರಿಪೋರ್ಟ್ ಇಲ್ಲದವರಿಗೆ ಸ್ಥಳದಲ್ಲಿಯೇ ಉಚಿತ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದ್ದು, ಎರಡು ದಿನಗಳಲ್ಲಿ ಟೆಸ್ಟ್ ವರದಿ ಅವರ ಕೈಸೇರಲಿದೆ.
ಕೇರಳ ಗಡಿ ಭಾಗದಲ್ಲಿ ಕೊರೋನ ಪ್ರಕರಣಗಳು ಹೆಚ್ಚುತ್ತಿರುವಂತೆ ರೂಪಾಂತರಿತ ಡೆಲ್ಟಾ ಕೋವಿಡ್ ಸೋಂಕು ಪತ್ತೆಯಾಗಿರುವ ಶಂಕೆಯ ಹಿನ್ನೆಲೆಯಲ್ಲಿ ಆ ರಾಜ್ಯದ ಗಡಿಯನ್ನು ಹಂಚಿಕೊಳ್ಳುವ ಕರ್ನಾಟಕದ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ರಾಜ್ಯ ಸರಕಾರ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಕೇರಳ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಚೆಕ್ಪೋಸ್ಟ್ಗಳಲ್ಲಿ ಕಟ್ಟು ನಿಟ್ಟಿನ ಕ್ರಮ ವಹಿಸಲಾಗಿದೆ.