ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಮುಂದಿನ ಜೂನ್ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬೆಂಗಳೂರು ವಿಮಾನ ನಿಲ್ದಾಣದ ಬಳಿಕ ಶಿವಮೊಗ್ಗದಲ್ಲಿಯೇ ಅಂತಹ ಸುಸಜ್ಜಿತ ವಿಮಾನ ನಿಲ್ದಾಣ ನಿರ್ಮಾಣವಾಗಲಿದೆ. ಹಣಕಾಸಿನ ಅಡಚಣೆ ನಡುವೆಯೂ ಅನುದಾನ ಬಿಡುಗಡೆಗೊಳಿಸಿ ತ್ವರಿತಗತಿಯಲ್ಲಿ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.
ವಿಮಾನ ನಿಲ್ದಾಣ ನಿರ್ಮಾಣದಿಂದ ಮಧ್ಯ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಗತಿ ನಿರೀಕ್ಷಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ಸರ್ವಾಂಗೀಣ ಪ್ರಗತಿ ಸಾಧ್ಯವಾಗಲಿದೆ. ಹೆಚ್ಚಿನ ಕೈಗಾರಿಕೆಗಳು ಪ್ರಾರಂಭವಾಗಿ ಉದ್ಯೋಗವಕಾಶ ಸೃಷ್ಟಿಯಾಗಲಿದೆ ಎಂದು ತಿಳಿಸಿದರು.
ರನ್ ವೇ ಕಾಮಗಾರಿ, ಸಂಪರ್ಕ ರಸ್ತೆ, ಪೆರಿಮೀಟರ್ ರಸ್ತೆ ಕಾಮಗಾರಿಗಳು ಪ್ರಗತಿಯಲ್ಲಿವೆ. ಕಾಂಪೌಡ್ ನಿರ್ಮಾಣ ಬಹುತೇಕ ಪೂರ್ಣಗೊಂಡಿದ್ದು, 15900 ಮೀಟರ್ ಪೈಕಿ 11500 ಮೀಟರ್ ಕಾಂಪೌಡ್ ನಿರ್ಮಾಣ ಪೂರ್ಣಗೊಳಿಸಲಾಗಿದೆ ಎಂದರು.