ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಿಸುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿವೆ ಎಂದು ವಿರೋಧ ಪಕ್ಷದ ನಾಯಕ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ರಾಜ್ಯದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡು 14 ತಿಂಗಳಾದವು. ಕಳೆದ ಒಂದು ತಿಂಗಳಿಂದ ಇಚೇಗೆ 2ನೇ ಅಲೆ ಆರಂಭವಾಗಿದೆ. ಈಗ ಉಂಟಾಗುತ್ತಿರುವ ಸಾವು – ನೋವಿಗೆ ಸರ್ಕಾರದ ನಿರ್ಲಕ್ಷ್ಯವೇ ಕಾರಣ. ಸಂಸತ್ತಿನ ಸ್ಥಾಯಿ ಸಮಿತಿ ಕೇಂದ್ರ ಸರ್ಕಾರಕ್ಕೆ ಕೊರೊನಾ 2ನೇ ಅಲೆ ಬಗ್ಗೆ ಎಚ್ಚರಿಕೆ ನೀಡಿ ಸಿದ್ಧತೆ ಮಾಡಿಕೊಳ್ಳುವಂತೆ ಸಲಹೆ ನೀಡಿತ್ತು. ಆದರೆ ಈ ವರದಿಯನ್ನ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣ ನಿರ್ಲಕ್ಷ್ಯ ಮಾಡಿದ್ದವು ಎಂದು ಕಿಡಿಕಾರಿದ್ದಾರೆ.
ಆಕ್ಸಿಜನ್, ಬೆಡ್, ಐಸಿಯು, ಔಷಧಗಳ ಸಿದ್ಧತೆ ಮಾಡಿಕೊಳ್ಳಬೇಕಾದ ಸರ್ಕಾರಗಳು ಅನಗತ್ಯ ಕಾಲಹರಣ ಮಾಡಿದವು. ಇದರ ಪರಿಣಾಮ ಇಂದು ಕೊರೊನಾ ಎರಡನೇ ಅಲೆ ಜೀವಗಳನ್ನು ಬಲಿಪಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸಲಹೆ ನೀಡಬಯಸುತ್ತೇನೆ ಎಂದಿರುವ ಸಿದ್ದರಾಮಯ್ಯ ಸಿಎಂ ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದಾರೆ.