ಬೆಂಗಳೂರು: ರಾಜ್ಯ ಸರ್ಕಾರ ಅಕ್ರಮ ಗಣಿಗಾರಿಕೆಯನ್ನು ಸಹಿಸಿಕೊಳ್ಳುವುದಿಲ್ಲ. ಹೀಗಾಗಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೆ ನಿರ್ಧಾಕ್ಷೀಣ್ಯವಾಗಿ ಕ್ರಮ ಜರುಗಿಸಲಾಗುವುದು. ಆದರೆ, ಕಾನೂನು ಚೌಕಟ್ಟಿನಲ್ಲಿ ಕೆಲಸ ನಿರ್ವಹಿಸುತ್ತಿರುವ ಗಣಿಗಾರಿಕೆಗೆ ಅಡ್ಡಿ ಉಂಟು ಮಾಡಬಾರದು ಎಂದು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ವಿಧಾನ ಸೌಧದಲ್ಲಿ ಮಾತನಾಡಿದ ಸಿಎಂ ಬಿಎಸ್ವೈ, ಜಲ್ಲಿಕಲ್ಲುಗಳು ಇಲ್ಲದೆ ಇದ್ದರೆ ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳೂ ಸಹ ಕುಂಠಿತವಾಗುತ್ತದೆ, ಈ ಕುರಿತು ಭರವಸೆ ನೀಡಿರುವ ಯಡಿಯೂರಪ್ಪ, ಅಭಿವೃದ್ಧಿ ಕಾರ್ಯಗಳಿಗೆ ಜಲ್ಲಿ ಕಲ್ಲು ಕೊರತೆ ಉಂಟಾಗುತ್ತಿದೆ ಎಂಬ ವಿಚಾರ ನನ್ನ ಗಮನಕ್ಕೆ ಬಂದಿದೆ. ಹೀಗಾಗಿ ಅಭಿವೃದ್ಧಿ ಕಾರ್ಯಗಳಿಗೆ ಜಲ್ಲಿ ಕಲ್ಲು ಕೊರತೆ ಆಗದಂತೆ ನೋಡಿಕೊಳ್ಳಬೇಕು. ಅಕ್ರಮ ಇದ್ದರೆ ಮಾತ್ರ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ಸಿಎಂ ಯಡಿಯೂರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದ ಹುಣಸೋಡುವಿನಲ್ಲಿ ಇತ್ತೀಚಿಗೆ ಕ್ರಷರ್ ಬಳಿ ಜಿಲೆಟಿನ್ ಸ್ಪೋಟಗೊಂಡು 6 ಕಾರ್ಮಿಕರು ಮೃತಪಟ್ಟಿದ್ದರು. ಇದು ದೇಶಾದ್ಯಂತ ಸುದ್ದಿಯಾಗಿತ್ತು. ಮೃತ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ರಾಜ್ಯ ಸರ್ಕಾರ ನೀಡಿದೆ. ಅಕ್ರಮ ಗಣಿಗಾರಿಕೆ ಮತ್ತು ಕಲ್ಲು ಕ್ವಾರಿಗಳ ಮೇಲೆ ಕಾನೂನು ಕ್ರಮ ತೆಗೆದುಕೊಳ್ಳಬೇಕೆಂದು ಎಲ್ಲೆಡೆ ಒತ್ತಾಯ ಕೇಳಿಬಂದಿತ್ತು.