ರಾಜ್ಯದಲ್ಲಿ ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉತ್ತರ ಕನ್ನಡ ಸೇರಿ 7 ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮೂವರು ಮೃತಪಟ್ಟಿದ್ದಾರೆ.
ಉತ್ತರ ಕನ್ನಡದ ಮಲೆನಾಡಿನ ತಾಲೂಕುಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಉತ್ತರ ಕರ್ನಾಟಕದಲ್ಲಿ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಇಬ್ಬರು ನಾಪತ್ತೆಯಾಗಿದ್ದು, ಆತಂಕ ಹೆಚ್ಚಾಗಿದೆ.
ಚಾರ್ಮಾಡಿ ಘಾಟ್ ಸೇರಿ ಕೊಡಗು, ಚಿಕ್ಕಮಗಳೂರು, ಹಾವೇರಿ, ಶಿವಮೊಗ್ಗ, ಬೆಳಗಾವಿ, ಹಾಸನ, ಧಾರವಾಡ, ದಾವಣಗೆಡೆ, ಕೊಡಗು ಹಾಗೂ ಉತ್ತರ ಕನ್ನಡದ ಹಲವಡೆ ಮತ್ತೆ ಭೂ ಕುಸಿತ ಸಂಭವಿಸಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಮಳೆ ಸಂಬಂಧಿ ಅನಾಹುತಗಳಿಗೆ ರಾಜ್ಯದಲ್ಲಿ ಮೂವರು ಸಾವನ್ನಪ್ಪಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆ. ಉತ್ತರ ಕನ್ನಡದಲ್ಲಿ ಮಳೆ ಅನಾಹುತ ಸೃಷ್ಟಿಸಿದ್ದು, ಹೆಲಿಕಾಪ್ಟರ್ ಬಳಸಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಕಾಳಿ, ಅಘನಾ, ಶಿನಿ, ಗಂಗಾವಳಿ, ಲಕ್ಷ್ಮಣ ತೀರ್ಥ ಕಾವೇರಿಯಲ್ಲಿ ಪ್ರವಾಹ ಉಂಟಾಗಿದೆ. ಭಾರೀ ಮಳೆಗೆ ಚಿಕ್ಕಮಗಳೂರಿನಲ್ಲಿ ಮನೆ ಕುಸಿತಗೊಂಡು 60 ವರ್ಷದ ರೈತ ಮೃತಪಟ್ಟಿದ್ದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಇನ್ನು ಗಂಗಾವಳಿ ನದಿಯಲ್ಲಿ ರಕ್ಷಣಾ ಕಾರ್ಯಾಚರಣೆ ವೇಳೆ ಬೋಟ್ ಮುಳುಗಿದ ಪರಿಣಾಮ ಇಬ್ಬರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ.
ಚಿಕ್ಕಮಗಳೂರಲ್ಲಿ ತುಂಗಾ, ಭದ್ರಾ, ಹೇಮಾವತಿ, ಬೆಳಗಾವಿಯಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ವೇದಗಂಗಾ, ದೂಧ್ ಗಂಗಾ, ಹಿರಣ್ಯಕೇಶಿ, ಪಾಂಡ್ರಿ, ಹಾವೇರಿಯಲ್ಲಿ ತುಂಗಭದ್ರಾ, ವರದಾ, ಧರ್ಮಾ, ಕುಮುದ್ವತಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ.
ಸುಮಾರು 100ಕ್ಕೂ ಹೆಚ್ಚು ಗ್ರಾಮಗಳಲ್ಲಿ ಪ್ರವಾಹ ಕಾಣಿಸಿಕೊಂಡಿದೆ. 400ಕ್ಕೂ ಹೆಚ್ಚು ಮಂಮದಿಯನ್ನು ರಕ್ಷಿಸಲಾಗಿದ್ದು, ಸಾವಿರಾರು ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ಈ ಮಧ್ಯೆ ಕ್ಯಾಸರ್ ರಾಕ್ ಬಳಿ ಎರಡು ಕಡೆ ಭೂಕುಸಿತ ಉಂಟಾಗಿದೆ. ಇದರ ಪರಿಣಾಮ ಮಂಗಳೂರು-ಮುಂಬೈ ರೈಲು ಹಳಿ ತಪ್ಪಿದೆ.
ನೆರೆಯ ಮಹಾರಾಷ್ಟ್ರದ ಘಟ್ಟ ಪ್ರದೇಶ, ಪಶ್ಚಿಮ ಘಟ್ಟ ಪ್ರದೇಶ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯ ಕೃಷ್ಣಾ, ಘಟಪ್ರಭಾ ಸೇರಿ ಸಪ್ತ ನದಿಗಳು ಉಕ್ಕಿ ಹರಿಯುತ್ತಿವೆ. ಜಿಲ್ಲೆಯಲ್ಲಿ 51 ಗ್ರಾಮಗಳು ಜಲಾವೃತಗೊಂಡಿದ್ದು, 36 ಸೇತುವೆಗಳು ಮುಳುಗಡೆಯಾಗಿವೆ. 51 ಗ್ರಾಮಗಳಿಗೆ ನೀರು ನುಗ್ಗಿದ್ದು, ಕಾಳಜಿ ಕೇಂದ್ರಗಳಲ್ಲಿ 200 ಜನರಿಗೆ ಆಶ್ರಯ ನೀಡಲಾಗಿದೆ. 300ಕ್ಕೂ ಹೆಚ್ಚು ಮಂದಿಯನ್ನು ರಕ್ಷಣೆ ಮಾಡಲಾಗಿದೆ.