ಕೇಂದ್ರ ಜಾರಿಗೊಳಿಸಲು ಉದ್ದೇಶಿಸಿರುವ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕರೆ ನೀಡಿದ್ದ ಭಾರತ್ ಬಂದ್ ಗೆ ದೇಶದ ಹಲವೆಡೆ ಉತ್ತಮ ಪ್ರತಿಕ್ರಿಯೆ ಲಭಿಸಿದ್ದು, ಸೋಮವಾರ ರಾಜಧಾನಿ ದೆಹಲಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ಪ್ರತಿಭಟನೆಗೆ 500 ಕ್ಕೂ ಹೆಚ್ಚು ಸಂಘಟನೆಗಳು, 15 ಕಾರ್ಮಿಕ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ಬಂದ್ಗೆ ಬೆಂಬಲ ಸೂಚಿಸಿದ್ದು, ಭಾರತ್ ಬಂದ್ ಹಿನ್ನೆಲೆಯಲ್ಲಿ ರೈತರು ಘಾಜಿಪುರದಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸುತ್ತಿದ್ದು, ಉತ್ತರ ಪ್ರದೇಶ-ದೆಹಲಿ ಮಾರ್ಗದಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ. ಎಂದು ತಿಳಿದುಬಂದಿದೆ.
ಇಂದು ಬೆಳಗ್ಗೆ 11 ಗಂಟೆಗೆ ರೈತ-ಕಾರ್ಮಿಕ ಸಂಘಟನೆಗಳು ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂಥರ್ನಲ್ಲಿ ಪ್ರತಿಭಟನಾ ರ್ಯಾಲಿ ಆಯೋಜಿಸಿವೆ. ಚಂಡೀಗಢದಲ್ಲಿ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ರೈತರು ದೆಹಲಿ ಸಂಪರ್ಕಿಸುವ ಹರಿಯಾಣ- ಪಂಜಾಬ್ ರಾಷ್ಟ್ರೀಯ ಹೆದ್ದಾರಿಗಳನ್ನು ತಡೆದಿದ್ದಾರೆ. ಹೆದ್ದಾರಿಗಳಲ್ಲಿ ನೂರಾರು ರೈತರು ಜಮಾವಣೆಗೊಂಡಿದ್ದರಿಂದ ಸಂಚಾರ ದಟ್ಟಣೆ ಎದುರಾಗಿದೆ. ಅಲ್ಲದೇ, ಹೆದ್ದಾರಿಗಳಲ್ಲಿ ಟ್ರ್ಯಾಕ್ಟರ್ ನಿಲ್ಲಿಸಿ, ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪ್ರತಿಭಟನೆಗಳು ನಡೆಯುತ್ತಿರುವ ಸ್ಥಳಗಳಲ್ಲಿ ಭಾರಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ. ಈವರೆಗೆ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ. ತುರ್ತು ವೈದ್ಯಕೀಯ ಸೇವೆಗಳಿಗೆ ಅವಕಾಶವಿದೆ.
ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವುದು, ಹಿಂಸಾಚಾರ ತಡೆಗಟ್ಟುವುದು ಮತ್ತು ಸಂಚಾರ ಮತ್ತು ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳ ಕಾರ್ಯನಿರ್ವಹಣೆ ಸುಲಭಗೊಳಿಸುವುದು ಈ ವ್ಯವಸ್ಥೆಗಳ ಪ್ರಾಥಮಿಕ ಉದ್ದೇಶ ಎಂದು ಅವರು ಹೇಳಿದ್ದಾರೆ.
ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ರೈತರು ಶಾಂತಿಯುತವಾಗಿ ಪ್ರತಿಭಟಿಸಬೇಕು ಎಂದು ಅವರು ಮನವಿ ಮಾಡಿದರು. ಬಂದ್ ಕರೆಯ ನೆಪದಲ್ಲಿ ಸಾರ್ವಜನಿಕ ಸುವ್ಯವಸ್ಥೆಗೆ ಭಂಗ ತರುವವರ ವಿರುದ್ಧ ಕಾನೂನಿನ ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.