ಬೆಂಗಳೂರು : 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಕಳೆದ 15 ದಿನಗಳಿಂದ ಸಾರಿಗೆ ನೌಕರರು ನಡೆಸುತ್ತಿದ್ದ ಅನಿರ್ಧಿಷ್ಟಾವದಿ ಮುಷ್ಕರ ಅಂತ್ಯಗೊಳಿಸಲು ನಿರ್ಧರಿಸಲಾಗಿದೆ ಎಂದು ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಘೋಷಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾದಿಂದಾಗಿ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಮುಷ್ಕರ ನಡೆಸಿ ಜನರಿಗೆ ತೊಂದರೆ ಕೊಡಬೇಡಿ. ಕರ್ತವ್ಯಕ್ಕೆ ಹಾಜರಾಗಿ ಎಂದು ಹೈಕೋರ್ಟ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯದ ಮಾತಿಗೆ ಗೌರವ ನೀಡಿ ಸಾರಿಗೆ ಸಿಬ್ಬಂದಿಗಳು ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದಾರೆ ಎಂದರು.
ನಾಳೆಯಿಂದ ನೌಕರರು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಆದರೆ ಸರ್ಕಾರದ ಮುಂದೆ ಇಟ್ಟಿರುವ ಬೇಡಿಕೆಯಿಂದ ಹಿಂದೆಸರಿಯುತ್ತಿಲ್ಲ. ಸತ್ಯಾಗ್ರಹ ದಮನ ಮಾಡಲು ಸರ್ಕಾರ ಮುಷ್ಕರ ನಿರತ ನೌಕರರ ವಿರುದ್ಧ ಕೈಗೊಂಡಿರುವ ಕ್ರಮಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.
ಸಾರಿಗೆ ನೌಕರರು ಮುಷ್ಕರ ಹಿಂಪಡೆಯುತ್ತಿದ್ದಂತೆ ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಬಸ್ಗಳ ಸಂಚಾರ ಹೆಚ್ಚಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಬಸ್ಗಳು ರಸ್ತೆಗಿಳಿದಿವೆ. ನಾಳೆ ಬೆಳಗ್ಗೆಯಿಂದ 4 ನಿಗಮಗಳ ಬಸ್ ಸಂಚಾರ ಯಥಾಸ್ಥಿತಿಯಲ್ಲಿರಲಿದೆ.