ಬೆಂಗಳೂರು: ರಾಜ್ಯದಲ್ಲಿ ಜಿ.ಪಂ, ತಾ.ಪಂ ಚುನಾವಣೆ ಬರುತ್ತಿವೆ. ಕೋವಿಡ್ ಹೆಚ್ಚಳದಿಂದ ಚುನಾವಣೆ ಬೇಡವೆಂಬ ಸಲಹೆ ಇದೆ. ಹಾಗಾಗಿ ಸದ್ಯಕ್ಕೆ ಚುನಾವಣೆ ಮುಂದಕ್ಕೆ ಹಾಕಲು ಚಿಂತನೆ ನಡೆಸಲಾಗಿದೆ. ಸಂಪುಟ ಸಬ್ ಕಮಿಟಿ ಸಭೆಯಲ್ಲಿ ಚರ್ಚಿಸುತ್ತೇವೆ ನಂತರ ಇದರ ಬಗ್ಗೆ ಅಂತಿಮ ತೀರ್ಮಾನ ಮಾಡುತ್ತೇವೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನಾ 2ನೇ ಅಲೆಯ ಅಬ್ಬರ ಜೋರಾಗಿದೆ. ಈಗಾಗಲೇ ಉತ್ತರ ಭಾರತದ ವಿಧಾನಸಭಾ ಚುನಾವಣೆಗಳಿಂದಾಗಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ ಎನ್ನಲಾಗುತ್ತಿದೆ. ಇಂತಹ ಸಂದರ್ಭದಲ್ಲೇ, ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿಗಳ ಚುನಾವಣೆ ಕೂಡ ಮುಂದೂಡಿಕೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ ಎಂದರು.
ಅವಧಿ ಮುಗಿದ ಕಡೆ ಆಡಳಿತಾಧಿಕಾರಿ ಹಾಕಬೇಕು. ಈ ವಿಚಾರದ ಬಗ್ಗೆಯೂ ಚರ್ಚೆ ನಡೆದಿದೆ. ಕೋವಿಡ್ ಹೆಚ್ಚು ಉಲ್ಬಣವಾಗುತ್ತಿದೆ. ಮೂರುವರೆ ಕೋಟಿ ಜನ ಇದರಲ್ಲಿ ಭಾಗಿಯಾಗಬೇಕು. ಹಾಗಾಗಿ ಮುಂದೂಡುವುದು ಸೂಕ್ತ ಎಂಬ ಅಭಿಪ್ರಾಯ ಇದೆ. ಇದನ್ನ ಕ್ಯಾಬಿನೆಟ್ ನಲ್ಲಿ ಚರ್ಚಿಸಿ ಆಯೋಗಕ್ಕೆ ಕಳಿಸುತ್ತೇವೆ ಎಂದರು.
ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ. ನಂತರ ಚುನಾವಣಾ ಆಯೋಗಕ್ಕೆ ಶಿಫಾರಸು ಮಾಡಲಾಗುತ್ತದೆ. ಚುನಾವಣೆ ಮುಂದೂಡಿಕೆ ಬಗ್ಗೆ ನಮ್ಮ ಅಧಿಕಾರಿಗಳ ಜೊತೆ ಚರ್ಚಿಸಿದ್ದೇವೆ. ಅವರು ಮುಂದೂಡಿಕೆ ಬಗ್ಗೆ ಸಲಹೆ ಕೊಟ್ಟಿದ್ದಾರೆ. ಹಾಗಾಗಿ ಜಿ.ಪಂ, ತಾ.ಪಂ ಚುನಾವಣೆ ನಡೆಸಲ್ಲ. ಚುನಾವಣಾ ಆಯೋಗಕ್ಕೆ ಮನವಿ ಮಾಡುತ್ತೇವೆ ಎಂದು ತಿಳಿಸಿದರು.